
ವಿಜಯಪುರ, 12 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ರೈತರು ಹಾಗೂ ಸಾರ್ವಜನಿಕರ ಬಹುಕಾಲದ ಆಶಯವಾಗಿರುವ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಶಾಸಕ ಶಿವಾನಂದ ಪಾಟೀಲ್ ಪರಿಶೀಲಿಸಿದರು.
ಪ್ರಗತಿಯಲ್ಲಿರುವ ಕೆರೆ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಶಿವಾನಂದ ಪಾಟೀಲ ಅವರು ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಕಾಮಗಾರಿಯ ಪ್ರಸ್ತುತ ಸ್ಥಿತಿ ಹಾಗೂ ಪ್ರಗತಿಯ ವಿವರಗಳನ್ನು ಪಡೆದುಕೊಂಡರು.
ಈ ಯೋಜನೆ ಪೂರ್ಣಗೊಂಡ ಬಳಿಕ ಕ್ಷೇತ್ರದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಾವರಿ ಸೌಲಭ್ಯ ಸುಧಾರಿಸಲಿದೆ. ಅಲ್ಲದೆ ಕೆರೆಯಲ್ಲಿ ನೀರು ಸಂಗ್ರಹವಾಗುವುದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಿ, ರೈತರ ಕೃಷಿ ಉತ್ಪಾದನೆಗೆ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದರು.
ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ನಿರ್ದೇಶನ ನೀಡಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿ, ರೈತರ ಹಿತಾಸಕ್ತಿ ಹಾಗೂ ಸಾರ್ವಜನಿಕರ ಮೂಲಭೂತ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಜನರ ಆಶೋತ್ತರಗಳನ್ನು ಈಡೇರಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಶಾಸಕ ಶಿವಾನಂದ ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande