ರೋಣದಲ್ಲಿ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಗದಗ, 12 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಫೋಟೋ


ಗದಗ, 12 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನೂರಾರು ಕಾರ್ಯಕರ್ತರು, ಅಭಿಮಾನಿಗಳು, ಮಹಿಳೆಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಜಿ.ಎಸ್. ಪಾಟೀಲ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲ ಅವರು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನಸೇವೆಗೆ ಸಾಕಷ್ಟು ಕೊಡುಗೆ ನೀಡಿದ್ದರೂ ಇದುವರೆಗೆ ಸಚಿವ ಸ್ಥಾನದಿಂದ ವಂಚಿತರಾಗಿರುವುದು ಕ್ಷೇತ್ರದ ಜನತೆಗೆ ಬೇಸರ ತಂದಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಪ್ರತಿಭಟನೆ ವೇಳೆ ಕೆಲಕಾಲ ಉದ್ವಿಗ್ನ ವಾತಾವರಣವೂ ನಿರ್ಮಾಣವಾಯಿತು. ಜಿ.ಎಸ್. ಪಾಟೀಲ ಅವರ ಅಭಿಮಾನಿಯೊಬ್ಬರು ಸಚಿವ ಸ್ಥಾನ ನೀಡದಿದ್ದರೆ ವಿಷ ಸೇವಿಸುವುದಾಗಿ ಹೇಳಿ ವಿಷದ ಬಾಟಲಿಯನ್ನು ಕೈಯಲ್ಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು. ಇದರಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ತಕ್ಷಣ ಅಕ್ಕಪಕ್ಕದಲ್ಲಿದ್ದ ಜನರು ಹಾಗೂ ಮುಖಂಡರು ಆತನ ಕೈಯಿಂದ ವಿಷದ ಬಾಟಲಿಯನ್ನು ಕಸಿದುಕೊಂಡು ಅನಾಹುತ ತಪ್ಪಿಸಿದರು. ಕೆಲಕಾಲ ಸ್ಥಳದಲ್ಲಿ ಹೈಡ್ರಾಮಾ ನಡೆದಿದ್ದು, ಬಳಿಕ ಪರಿಸ್ಥಿತಿ ಸಹಜಗೊಂಡಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಠಾಧೀಶರು, ಜಿ.ಎಸ್. ಪಾಟೀಲ ಅವರು ಕಳೆದ ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಸಚಿವ ಸ್ಥಾನಕ್ಕೆ ಎಲ್ಲ ರೀತಿಯಲ್ಲೂ ಅರ್ಹರಾಗಿದ್ದಾರೆ ಎಂದು ಹೇಳಿದರು. ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದ್ದು, ಈ ಬಾರಿ ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದಿನ ಹೇಳಿಕೆಯನ್ನು ಉಲ್ಲೇಖಿಸಿ, ಜಿ.ಎಸ್. ಪಾಟೀಲ ಅವರು ಸಚಿವರಾಗಲು ಅರ್ಹರು ಎಂದು ಸ್ವತಃ ಸಿದ್ದರಾಮಯ್ಯ ಅವರೇ ಹೇಳಿದ್ದರು. ಆದ್ದರಿಂದ ಇದೀಗ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಕೂಡ ಜಿ.ಎಸ್. ಪಾಟೀಲ ಅವರ ಪರವಾಗಿ ಧ್ವನಿ ಎತ್ತಿದರು. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸಾವಿರಾರು ಜನರ ನೆರವಿಗೆ ಧಾವಿಸಿ, ವೈದ್ಯಕೀಯ ಸೌಲಭ್ಯಗಳು ಹಾಗೂ ಅಗತ್ಯ ನೆರವು ಒದಗಿಸುವ ಮೂಲಕ ಅನೇಕ ಜೀವಗಳನ್ನು ಉಳಿಸುವ ಕೆಲಸವನ್ನು ಅವರು ಮಾಡಿದ್ದಾರೆ. ಇಂತಹ ಜನಪರ ನಾಯಕನಿಗೆ ಸಚಿವ ಸ್ಥಾನ ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಮಹಿಳೆಯರು ಅಭಿಪ್ರಾಯಪಟ್ಟರು.

ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಸಚಿವ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಹೇಳಿದರು. ಅಗತ್ಯವಿದ್ದರೆ ರೋಣ ಕ್ಷೇತ್ರದ ಸಾವಿರಾರು ಜನರನ್ನು ಒಗ್ಗೂಡಿಸಿ “ಬೆಂಗಳೂರು ಚಲೋ” ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೋಣ ಕ್ಷೇತ್ರದ ಜನರ ಭಾವನೆಗಳಿಗೆ ಸರ್ಕಾರ ಸ್ಪಂದಿಸಿ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಹೋರಾಟವನ್ನು ವಿಸ್ತರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು.

ಈ ಪ್ರತಿಭಟನೆ ಸಚಿವ ಸಂಪುಟ ವಿಸ್ತರಣೆ ಕುರಿತ ರಾಜಕೀಯ ಚರ್ಚೆಗೆ ಮತ್ತಷ್ಟು ಬಲ ನೀಡಿದ್ದು, ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬುದು ಈಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲದ ವಿಷಯವಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande