
ಬಾಗಲಕೋಟೆ, 12 ಜೂನ್ (ಹಿ.ಸ.) :
ಆಂಕರ್ : ಅಪ್ರಾಪ್ತ ವಯಸ್ಕರಲ್ಲಿ ಮಧ್ಯಪಾನ ಪ್ರವೃತ್ತಿಯನ್ನು ತಡೆಗಟ್ಟುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಬಾರ್ಗಳು, ವೈನ್ ಶಾಪ್ಗಳು ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ಗಳ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆಯನ್ನು ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬೀಳಗಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವರು, ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಅಪ್ರಾಪ್ತರಿಗೆ ಮದ್ಯ ಮಾರಾಟ, ಪೂರೈಕೆ ಅಥವಾ ಸೇವನೆಗೆ ಅವಕಾಶ ನೀಡುವುದನ್ನು ಸಂಪೂರ್ಣವಾಗಿ ತಡೆಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದು, ಪೂರೈಸುವುದು ಅಥವಾ ಸೇವಿಸಲು ಅವಕಾಶ ಕಲ್ಪಿಸುವುದು ಕಾನೂನುಬಾಹಿರವಾಗಿದೆ ಎಂದು ತಿಳಿಸಿದ ಅವರು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಬಾರ್ ಮತ್ತು ವೈನ್ ಶಾಪ್ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹಲವು ಮಾರ್ಗಸೂಚಿಗಳನ್ನು ನೀಡಲಾಯಿತು. ಗ್ರಾಹಕರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮದ್ಯ ಖರೀದಿಸುವ ವ್ಯಕ್ತಿಗಳಿಂದ ವಯಸ್ಸಿನ ಪುರಾವೆಯಾಗಿ ಗುರುತಿನ ಚೀಟಿ ಪರಿಶೀಲಿಸಬೇಕು.
ಗುರುತಿನ ಚೀಟಿ ಇಲ್ಲದವರಿಗೆ ಪ್ರವೇಶ ಅಥವಾ ಮದ್ಯ ಸೇವನೆಗೆ ಅವಕಾಶ ನೀಡಬಾರದು ಎಂದು ಸೂಚಿಸಲಾಯಿತು.
ಅದೇ ರೀತಿ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಯಾವುದೇ ಕಾರಣಕ್ಕೂ ಮದ್ಯ ನೀಡಬಾರದು. ವಯಸ್ಸು ಪರಿಶೀಲನೆಗೆ ಸಂಬಂಧಿಸಿದ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು. ಎಲ್ಲಾ ಸಂಸ್ಥೆಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಿ, ಅಗತ್ಯವಿದ್ದಾಗ ಪರಿಶೀಲನೆಗೆ ಸಹಕರಿಸಬೇಕು ಎಂದು ತಿಳಿಸಲಾಯಿತು.
ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ನಿಷೇಧಿಸಿರುವ ಕುರಿತು ಸ್ಪಷ್ಟವಾದ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ನಿಯಮಗಳ ಪಾಲನೆಯ ಸಂಪೂರ್ಣ ಹೊಣೆಗಾರಿಕೆ ಮಾಲೀಕರು ಮತ್ತು ವ್ಯವಸ್ಥಾಪಕರ ಮೇಲಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.
ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಕಾಪಾಡುವಲ್ಲಿ ಸಾರ್ವಜನಿಕರು ಮತ್ತು ವ್ಯಾಪಾರಸ್ಥರ ಸಹಕಾರ ಅತ್ಯಂತ ಅಗತ್ಯವಾಗಿದೆ. ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಸಭೆಯಲ್ಲಿ ಬೀಳಗಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ವಿವಿಧ ಬಾರ್ ಮತ್ತು ವೈನ್ ಶಾಪ್ಗಳ ಮಾಲೀಕರು, ಮ್ಯಾನೇಜರ್ಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande