ಮಳೆಗಾಲದ ಮುನ್ನೆಚ್ಚರಿಕೆ ; ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ- ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ವಿಜಯಪುರ, 12 ಜೂನ್ (ಹಿ.ಸ.) : ಆಂಕರ್ : ಮುಂಗಾರು ಪೂರ್ವ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ತಾಲೂಕು ಮಟ್ಟದ ಅಧಿಕಾರಿಗಳು ಸಂಪೂರ್ಣ ಸನ್ನದ್ಧರಾಗಿರಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂ
ಪರಿಶೀಲಿಯನೆ


ವಿಜಯಪುರ, 12 ಜೂನ್ (ಹಿ.ಸ.) :

ಆಂಕರ್ : ಮುಂಗಾರು ಪೂರ್ವ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ತಾಲೂಕು ಮಟ್ಟದ ಅಧಿಕಾರಿಗಳು ಸಂಪೂರ್ಣ ಸನ್ನದ್ಧರಾಗಿರಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚಿಸಿದರು.

ಮುದ್ದೇಬಿಹಾಳ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರತಿ ಗ್ರಾಮಕ್ಕೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿ, ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ತಕ್ಷಣ ಸ್ಪಂದಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚಿಸಿದರು. ವಿಶೇಷವಾಗಿ ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಹರಿದು ಬಂದಲ್ಲಿ ಮುದ್ದೇಬಿಹಾಳ ತಾಲೂಕಿನ ಕೆಲವು ಗ್ರಾಮಗಳು ಪ್ರವಾಹಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಕೆಬಿಜೆಎನ್ಎಲ್ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಬೆಳೆದಿರುವ ಗಿಡ-ಗಂಟಿಗಳು ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಬೇಕು. ಮಳೆಗಾಲದಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗದಂತೆ ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಿಥಿಲಗೊಂಡಿರುವ ಶಾಲಾ ಕಟ್ಟಡಗಳು ಹಾಗೂ ಅಂಗನವಾಡಿ ಕೇಂದ್ರಗಳ ಬಳಿ ಮಕ್ಕಳು ತೆರಳದಂತೆ ಎಚ್ಚರಿಕೆ ವಹಿಸಬೇಕು. ಇಂತಹ ಕಟ್ಟಡಗಳ ಕುರಿತು ಮುಂಚಿತವಾಗಿ ಪರಿಶೀಲನೆ ನಡೆಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮುಂಗಾರು ಹಂಗಾಮಿನಲ್ಲಿ ರೈತರು ಕೃಷಿ ಚಟುವಟಿಕೆಗಳಿಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಪ್ರಮಾಣದಲ್ಲಿ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು. ರೈತರಿಗೆ ಯಾವುದೇ ತೊಂದರೆ ಉಂಟಾಗದಂತೆ ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಮುದ್ದೇಬಿಹಾಳ ತಹಶೀಲ್ದಾರ್ ಸೇರಿದಂತೆ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಳಿಕೋಟಿ ತಾಲೂಕಿನಲ್ಲಿ ಸೇತುವೆ ಕಾಮಗಾರಿಗಳ ಪರಿಶೀಲನೆ

ಸಭೆಯ ಬಳಿಕ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ತಾಳಿಕೋಟಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದ ದೃಷ್ಟಿಯಿಂದ ಅಗತ್ಯ ಪರಿಶೀಲನೆ ನಡೆಸಿದರು.

ತಾಳಿಕೋಟಿ-ವಿಜಯಪುರ ಮಾರ್ಗದಲ್ಲಿರುವ ಹಳೆಯ ಸೇತುವೆಯನ್ನು ಪರಿಶೀಲಿಸಿದ ಅವರು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕೆಆರ್ಡಿಸಿಎಲ್ ಇಂಜಿನಿಯರ್ಗಳಿಗೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ನಂತರ ತಾಳಿಕೋಟಿ-ಮುದ್ದೇಬಿಹಾಳ ಮಾರ್ಗದಲ್ಲಿರುವ ಸೋಗಲಿ ಹಳ್ಳಕ್ಕೆ ನಿರ್ಮಾಣವಾಗುತ್ತಿರುವ ನೂತನ ಸೇತುವೆ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಾಮಗಾರಿಯ ವೇಗ ಹೆಚ್ಚಿಸಿ ಶೀಘ್ರ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande