
ಬಾಗಲಕೋಟೆ, 12 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ನಗರದ ವಾರ್ಡ್ ನಂ.7ರಲ್ಲಿ ಕಳೆದ 20 ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮಹಿಳೆಯರು ನಗರಸಭೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ನೀರಿಗಾಗಿ ಪ್ರತಿದಿನ ಪರದಾಡುವ ಪರಿಸ್ಥಿತಿ ಉಂಟಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಾರ್ಡ್ನ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಮನೆಗಳಿಗೆ ಅಗತ್ಯ ಪ್ರಮಾಣದ ನೀರು ಲಭ್ಯವಾಗುತ್ತಿಲ್ಲ. ಬೇಸಿಗೆಯ ದಿನಗಳಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗಿದ್ದರೂ, ನಗರಸಭೆ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.
ಕುಡಿಯುವ ನೀರು ನಮ್ಮ ಮೂಲಭೂತ ಅಗತ್ಯವಾಗಿದ್ದು, ಅದನ್ನು ಒದಗಿಸುವಲ್ಲಿ ನಗರಸಭೆ ವಿಫಲವಾಗಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭನೆಯ ವೇಳೆ ಮಹಿಳೆಯರು ನಗರಸಭೆ ಕಚೇರಿ ಎದುರು ಜಮಾಯಿಸಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಹಾಕಿದರು.
ಕೂಡಲೇ ವಾರ್ಡ್ ನಂ.7ಕ್ಕೆ ನಿಯಮಿತವಾಗಿ ನೀರು ಪೂರೈಕೆ ಮಾಡುವಂತೆ ಹಾಗೂ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ನೀರು ಪೂರೈಕೆಯಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೆ, ಸಮಸ್ಯೆ ಬಗೆಹರಿಯುವವರೆಗೂ ಹೋರಾಟ ಮುಂದುವರಿಸುವುದಾಗಿ ಮಹಿಳೆಯರು ಎಚ್ಚರಿಕೆ ನೀಡಿದರು.
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಮರುಕಳಿಸುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದು, ನಗರಸಭೆ ಆಡಳಿತವು ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿ ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande