ಪರೀಕ್ಷಾ ಅಕ್ರಮಗಳ ವಿರುದ್ಧ ದೇಶವ್ಯಾಪಿ ಹೋರಾಟಕ್ಕೆ ಕಾಂಗ್ರೆಸ್ ಚಾಲನೆ
ನವದೆಹಲಿ, 13 ಜೂನ್ (ಹಿ.ಸ.) : ಆ್ಯಂಕರ್ : ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ನಿರುದ್ಯೋಗ ಹಾಗೂ ದೇಶದ ಯುವಜನತೆಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದೇಶವ್ಯಾಪಿ ಹೋರಾಟ ಆರಂಭಿಸುವುದಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಘೋಷಿಸಿದೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ
Cong press release


ನವದೆಹಲಿ, 13 ಜೂನ್ (ಹಿ.ಸ.) :

ಆ್ಯಂಕರ್ : ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ನಿರುದ್ಯೋಗ ಹಾಗೂ ದೇಶದ ಯುವಜನತೆಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದೇಶವ್ಯಾಪಿ ಹೋರಾಟ ಆರಂಭಿಸುವುದಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಘೋಷಿಸಿದೆ.

ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್ ಅವರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಈ ಅಭಿಯಾನವನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಅಭಿಯಾನದ ಮೊದಲ ಹಂತದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ವಿವಿಧ ನಗರಗಳಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶಗಳನ್ನು ನಡೆಸಲಿದ್ದಾರೆ. ಜೂನ್ 17ರಂದು ಕೋಟಾದಲ್ಲಿ ಆರಂಭವಾಗಲಿರುವ ಈ ಸರಣಿ ಸಭೆಗಳು ಜುಲೈ 10ರಂದು ಅಲಹಾಬಾದ್, ಜುಲೈ 11ರಂದು ಪಾಟ್ನಾ ಹಾಗೂ ಜುಲೈ 14ರಂದು ದೆಹಲಿಯಲ್ಲಿ ನಡೆಯಲಿವೆ.

ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳು, ಯುವ ಸಂಘಟನೆಗಳು, ಶಿಕ್ಷಕರು ಹಾಗೂ ಪರೀಕ್ಷಾ ಅಕ್ರಮಗಳಿಂದ ನೇರವಾಗಿ ತೊಂದರೆಗೊಳಗಾದವರನ್ನು ಈ ಸಮಾವೇಶಗಳಲ್ಲಿ ಒಟ್ಟುಗೂಡಿಸಲಾಗುವುದು. ಪ್ರಶ್ನೆಪತ್ರಿಕೆ ಸೋರಿಕೆ, ಹೆಚ್ಚುತ್ತಿರುವ ಪರೀಕ್ಷಾ ಶುಲ್ಕ ಹಾಗೂ ಪಾರದರ್ಶಕ ನೇಮಕಾತಿ ವ್ಯವಸ್ಥೆ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬುದನ್ನು ಅಭಿಯಾನದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆ (ಎನ್ಎಸ್ಯುಐ), ಯುವ ಕಾಂಗ್ರೆಸ್, ಪ್ರದೇಶ ಕಾಂಗ್ರೆಸ್ ಸಮಿತಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಮೂಲಕ ದೇಶಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸುವ ಕಾರ್ಯ ನಡೆಯಲಿದೆ. ಶಿಕ್ಷಣ ಸಂಸ್ಥೆಗಳು, ತರಬೇತಿ ಕೇಂದ್ರಗಳು, ವಿಶ್ವವಿದ್ಯಾಲಯಗಳು ಹಾಗೂ ಯುವ ಕೇಂದ್ರಗಳಲ್ಲಿ ನೇರ ಸಂಪರ್ಕ ಕಾರ್ಯಕ್ರಮಗಳು, ಸಾಮಾಜಿಕ ಜಾಲತಾಣ ಅಭಿಯಾನಗಳು ಹಾಗೂ ಸಾರ್ವಜನಿಕ ಸಂವಾದಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು.

ಯುವಕರ ಆಶಯಗಳು ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ರಾಜಕೀಯ ನಿರ್ಲಕ್ಷ್ಯಕ್ಕೆ ಬಲಿಯಾಗಬಾರದು ಎಂಬ ರಾಹುಲ್ ಗಾಂಧಿ ಅವರ ನಿಲುವಿಗೆ ಅನುಗುಣವಾಗಿ, ರಾಜಕೀಯ ಪಕ್ಷಭೇದ ಮೀರಿ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಪ್ರಯತ್ನ ನಡೆಸಲಾಗುವುದು. ಪರೀಕ್ಷಾ ಅಕ್ರಮಗಳಿಂದ ಹಾನಿಗೊಳಗಾದ ಯುವಕರಿಗೆ ತಮ್ಮ ಅನುಭವ ಹಂಚಿಕೊಳ್ಳಲು ವೇದಿಕೆ ಒದಗಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.

ಅಭಿಯಾನದ ಭಾಗವಾಗಿ ನೀಟ್ ಪರೀಕ್ಷೆಯನ್ನು ವಿಕೇಂದ್ರೀಕರಿಸುವುದು, ಪರೀಕ್ಷಾ ಶುಲ್ಕಗಳನ್ನು ರದ್ದುಪಡಿಸುವುದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಸೇರಿದಂತೆ ಉನ್ನತ ಮಟ್ಟದ ಹೊಣೆಗಾರಿಕೆಯನ್ನು ನಿಗದಿಪಡಿಸುವ ಬೇಡಿಕೆಗಳನ್ನು ಮುಂದಿರಿಸಲಾಗುವುದು.

ದೇಶದ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸುವಂತೆ ಒತ್ತಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಹಕ್ಕುಗಳು, ಅವಕಾಶಗಳು ಮತ್ತು ಭವಿಷ್ಯವನ್ನು ರಕ್ಷಿಸಲು ಅಗತ್ಯವಾದ ಶಾಸನಾತ್ಮಕ ಕ್ರಮಗಳಿಗೂ ಕಾಂಗ್ರೆಸ್ ಪಕ್ಷ ಒತ್ತಾಯಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande