
ಬಾಗಲಕೋಟೆ, 13 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದ ಹೆಸ್ಕಾಂ ಅಧಿಕಾರಿಗಳ ಸೂಚನೆಯ ಮೇರೆಗೆ ಸುಮಾರು ₹3 ಲಕ್ಷ ಸ್ವಂತ ಹಣ ಖರ್ಚು ಮಾಡಿ ವಿದ್ಯುತ್ ಲೈನ್ ಎಳೆಸಿದ್ದರೂ, ಇದುವರೆಗೂ ತೋಟದ ವಸ್ತಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ಆರೋಪಿಸಿ ಮಲ್ಲಾಪುರ ಪಿ.ಎಲ್. ಗ್ರಾಮದ ಮುಖಂಡರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಲೋಕಾಪುರ ಹೆಸ್ಕಾಂ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ರೈತರ ಅನುಕೂಲಕ್ಕಾಗಿ ಹಾಗೂ ತೋಟದ ವಸ್ತಿಗಳಿಗೆ ವಿದ್ಯುತ್ ಸೌಲಭ್ಯ ದೊರೆಯಬೇಕು ಎಂಬ ಉದ್ದೇಶದಿಂದ ಅಧಿಕಾರಿಗಳ ಮಾರ್ಗದರ್ಶನದಂತೆ ಸ್ವಂತ ಹಣದಲ್ಲಿ ವಿದ್ಯುತ್ ಕಂಬ ಹಾಗೂ ಲೈನ್ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಆದರೆ ಕಾಮಗಾರಿ ಮುಗಿದು ಹಲವು ದಿನಗಳು ಕಳೆದರೂ ಸಂಪರ್ಕ ನೀಡಲು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ದೂರಿದರು.
ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಲೈನ್ ಕೊಟ್ಟಿಲ್ಲ, ಮುಂದೆಯೂ ಕೊಡುವುದಿಲ್ಲ ಎಂಬ ರೀತಿಯಲ್ಲಿ ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅಧಿಕಾರಿಗಳು ಕರ್ತವ್ಯ ಲೋಪ ಎಸಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ತೋಟದ ವಸ್ತಿಗಳಲ್ಲಿ ವಾಸಿಸುವ ರೈತರು, ಕಾರ್ಮಿಕರು ಹಾಗೂ ಕುಟುಂಬಗಳು ವಿದ್ಯುತ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಹಾಗೂ ದೈನಂದಿನ ಜೀವನಕ್ಕೆ ವಿದ್ಯುತ್ ಅವಶ್ಯಕವಾಗಿದ್ದರೂ, ಸಂಪರ್ಕ ಕಲ್ಪಿಸುವಲ್ಲಿ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಹೆಸ್ಕಾಂ ಹಿರಿಯ ಅಧಿಕಾರಿಗಳು ಕೂಡಲೇ ಗಮನಹರಿಸಿ, ಈಗಾಗಲೇ ಅಳವಡಿಸಿರುವ ವಿದ್ಯುತ್ ಲೈನ್ ಪರಿಶೀಲಿಸಿ ತಕ್ಷಣ ಸಂಪರ್ಕ ಕಲ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಮಲ್ಲಾಪುರ ಪಿ.ಎಲ್. ಗ್ರಾಮದ ಮುಖಂಡರು, ರೈತರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande