ಜನಸ್ಪಂದನೆಯಿಂದ ಪರಿಸರ ಕಾಳಜಿವರೆಗೆ ಶಾಸಕ ಉಮೇಶ್ ಮೇಟಿ
ಬಾಗಲಕೋಟೆ, 13 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಮತಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾರ್ವಜನಿಕ ಸಮಸ್ಯೆಗಳ ಪರಿಹಾರ, ಪರಿಸರ ಸಂರಕ್ಷಣೆ, ಆರೋಗ್ಯ ಸೇವೆ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ಶಾಸಕ ಉಮೇಶ್ ಮೇಟಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರ
Bheti


ಬಾಗಲಕೋಟೆ, 13 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಮತಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾರ್ವಜನಿಕ ಸಮಸ್ಯೆಗಳ ಪರಿಹಾರ, ಪರಿಸರ ಸಂರಕ್ಷಣೆ, ಆರೋಗ್ಯ ಸೇವೆ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ಶಾಸಕ ಉಮೇಶ್ ಮೇಟಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರೊಂದಿಗೆ ಸಂವಾದ ನಡೆಸಿದರು.

ತಮ್ಮ ಸ್ವಗ್ರಾಮ ತಿಮ್ಮಾಪುರಕ್ಕೆ ಭೇಟಿ ನೀಡಿದ ಶಾಸಕ ಉಮೇಶ್ ಮೇಟಿ ಅವರು ಸಾರ್ವಜನಿಕರನ್ನು ಭೇಟಿಯಾಗಿ ಅವರ ಅಹವಾಲುಗಳನ್ನು ಆಲಿಸಿದರು. ಗ್ರಾಮಸ್ಥರು ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಅವುಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಳಿಕ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಎಸ್.ಐ.ಆರ್. (Special Intensive Revision) ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡ ಅವರು, ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಜವಾಬ್ದಾರಿ ಮಹತ್ವದ್ದಾಗಿದೆ. ಅರ್ಹ ಮತದಾರರ ಹೆಸರುಗಳು ತಪ್ಪದೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಕಾರ್ಯಕರ್ತರು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ನಂತರ ಬಾಗಲಕೋಟೆ ಪಟ್ಟಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ಬೆಳೆಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನವನಗರದಲ್ಲಿ ನೂತನವಾಗಿ ಆರಂಭಗೊಂಡಿರುವ Nature's Wellness Centre ನೈಸರ್ಗಿಕ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಸಂಸ್ಥಾಪಕರು ಹಾಗೂ ಸಿಬ್ಬಂದಿಗೆ ಶುಭಾಶಯಗಳನ್ನು ತಿಳಿಸಿದರು. ಆರೋಗ್ಯ ಕ್ಷೇತ್ರದಲ್ಲಿ ಜನರಿಗೆ ಉತ್ತಮ ಸೇವೆ ದೊರೆಯುವಂತಾಗಲಿ ಎಂದು ಆಶಿಸಿದರು.

ಶಿರೂರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಅಶೋಕ್ ಬೊಮ್ಮುನಗಿ ಅವರು ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಉಮೇಶ್ ಮೇಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ವೇಳೆ ಹೊಸೂರು ಗ್ರಾಮದ ಉಪ್ಪಾರ್ ಕುಟುಂಬದ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ, ದಂಪತಿಗಳಿಗೆ ಶುಭಾಶಯಗಳನ್ನು ಸಲ್ಲಿಸಿದರು.

ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಪರಿಹಾರ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗವಹಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಶಾಸಕ ಉಮೇಶ್ ಮೇಟಿ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande