
ಬಾಗಲಕೋಟೆ, 13 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮುತ್ತೂರ-ಝಂಜರವಾಡ ಬ್ಯಾರೇಜ್ಗೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬ್ಯಾರೇಜ್ನಲ್ಲಿನ ನೀರಿನ ಸಂಗ್ರಹ ಮಟ್ಟ, ನೀರಿನ ಹರಿವು ಹಾಗೂ ಪ್ರಸ್ತುತ ಸ್ಥಿತಿಗತಿಗಳನ್ನು ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ರೈತರು ತಮ್ಮ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಉಪವಿಭಾಗಾಧಿಕಾರಿಗಳ ಗಮನಕ್ಕೆ ತಂದರು. ರೈತರೊಂದಿಗೆ ಸಮಾಲೋಚನೆ ನಡೆಸಿದ ಶ್ವೇತಾ ಬೀಡಿಕರ ಅವರು, ಅವರ ಕುಂದುಕೊರತೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಬ್ಯಾರೇಜ್ನಿಂದ ಕೃಷಿ ಚಟುವಟಿಕೆಗಳಿಗೆ ಆಗುತ್ತಿರುವ ಅನುಕೂಲ, ನೀರಿನ ಬಳಕೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ರೈತರಿಗೆ ಸಮರ್ಪಕ ನೀರಿನ ಸೌಲಭ್ಯ ದೊರೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಸ್ಥಳೀಯ ರೈತರು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಉಪವಿಭಾಗಾಧಿಕಾರಿಗಳ ಭೇಟಿ ರೈತರಲ್ಲಿ ಆಶಾಭಾವನೆ ಮೂಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande