
ಬೆಂಗಳೂರು, 13 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಅಧಿನಿಯಮ–2022ರಡಿ ಪರಿಶಿಷ್ಟ ಜಾತಿಯವರಿಗೆ ಶೇ.17 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.7ರಷ್ಟು ಹೆಚ್ಚಿಸಲಾದ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು.
ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಡಾ. ಪ್ರಸನ್ನಾನಂದಪುರಿ ಸ್ವಾಮೀಜಿ, ಶಾಸಕರು ಹಾಗೂ ಸಮುದಾಯದ ಮುಖಂಡರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಈ ಸಂಬಂಧ ಚರ್ಚಿಸಿದರು.
ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಹಿನ್ನೆಲೆಯಲ್ಲಿ ಹೆಚ್ಚಿಸಲಾದ ಮೀಸಲಾತಿಯ ಅನುಷ್ಠಾನಕ್ಕೆ ಉಂಟಾಗಿರುವ ತಾತ್ಕಾಲಿಕ ಅಡಚಣೆಯನ್ನು ನಿವಾರಿಸಲು ಸರ್ಕಾರವು ಸಮರ್ಥವಾಗಿ ವಾದ ಮಂಡಿಸಿ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಮನವಿ ಮಾಡಿತು. ಈ ನಿಟ್ಟಿನಲ್ಲಿ ಸರ್ಕಾರದ ಪರವಾಗಿ ಹಿರಿಯ ಕಾನೂನು ತಜ್ಞ ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಿಸಿ, ಪರಿಶಿಷ್ಟ ಸಮುದಾಯಗಳ ಹಿತಾಸಕ್ತಿಯನ್ನು ನ್ಯಾಯಾಲಯದ ಮುಂದೆ ಪರಿಣಾಮಕಾರಿಯಾಗಿ ಪ್ರತಿಪಾದಿಸುವಂತೆ ಕೋರಲಾಯಿತು.
ಸಭೆಯಲ್ಲಿ ರಾಜ್ಯ ಸರ್ಕಾರದಲ್ಲಿ ಪರಿಶಿಷ್ಟ ಸಮುದಾಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವುದು ಹಾಗೂ ವಿಶ್ವವಿದ್ಯಾಲಯಗಳ ಉಪಕುಲಪತಿ ನೇಮಕಾತಿಗಳಲ್ಲಿ ಅರ್ಹ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ಸಹ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಬಸನಗೌಡ ದದ್ದಲ್, ಟಿ. ರಘುಮೂರ್ತಿ, ಡಾ. ಶ್ರೀನಿವಾಸ, ಜೆ.ಎನ್. ಗಣೇಶ್, ಮಾಜಿ ಸಂಸದ ದೇವೇಂದ್ರಪ್ಪ ಸೇರಿದಂತೆ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ನೀಡಲಾಗಿರುವ ಹೆಚ್ಚುವರಿ ಮೀಸಲಾತಿಯ ಅನುಷ್ಠಾನವನ್ನು ಶೀಘ್ರಗೊಳಿಸುವ ಮೂಲಕ ಸಾಮಾಜಿಕ ನ್ಯಾಯದ ಉದ್ದೇಶವನ್ನು ಸಾಕಾರಗೊಳಿಸಬೇಕೆಂದು ನಿಯೋಗ ಒತ್ತಾಯಿಸಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.