ಜೂ ೧೬ರಂದು ಎಚ್.ಕೆ.ಪಾಟೀಲಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ
ಗದಗ, 14 ಜೂನ್ (ಹಿ.ಸ.) ಆ್ಯಂಕರ್:- ರಾಜ್ಯ ರಾಜಕಾರಣದಲ್ಲಿ ದಕ್ಷ, ಪ್ರಾಮಾಣಿಕ ಹಾಗೂ ಕಳಂಕರಹಿತ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ಎಚ್.ಕೆ. ಪಾಟೀಲ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳದಿರುವುದನ್ನು ಖಂಡಿಸಿ ಜೂನ್ 16ರಂದು
ಫೋಟೋ


ಗದಗ, 14 ಜೂನ್ (ಹಿ.ಸ.)

ಆ್ಯಂಕರ್:- ರಾಜ್ಯ ರಾಜಕಾರಣದಲ್ಲಿ ದಕ್ಷ, ಪ್ರಾಮಾಣಿಕ ಹಾಗೂ ಕಳಂಕರಹಿತ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ಎಚ್.ಕೆ. ಪಾಟೀಲ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳದಿರುವುದನ್ನು ಖಂಡಿಸಿ ಜೂನ್ 16ರಂದು ಗದಗ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಕೆ. ಪಾಟೀಲ ಅವರ ಅಭಿಮಾನಿ ಬಳಗ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಹೇಳಿದರು. ಬೆಳಿಗ್ಗೆ 11 ಗಂಟೆಗೆ ನಗರದ ದಿ. ಕಾಟನ್ ಸೇಲ್ ಸೊಸೈಟಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ಭೂಮರಡ್ಡಿ ಸರ್ಕಲ್, ಮಹಾತ್ಮ ಗಾಂಧಿ ಸರ್ಕಲ್, ಮಹೇಂದ್ರಕರ್ ಸರ್ಕಲ್, ಟಾಂಗಾ ಕೂಟ, ಬಸವೇಶ್ವರ ಸರ್ಕಲ್, ಪಂಚರ ಹೊಂಡ ಹಾಗೂ ಜೋಡ ಮಾರುತಿ ದೇವಸ್ಥಾನ ಮಾರ್ಗವಾಗಿ ಮುಳಗುಂದ ನಾಕಾ ತಲುಪಿ ಪ್ರತಿಭಟನೆ ನಡೆಸಲಾಗುವುದು ಎಂದು ವಿವರಿಸಿದರು.

ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ಯಾವುದೇ ವೈಯಕ್ತಿಕ ಅವಶ್ಯಕತೆಯಲ್ಲ. ಆದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಅವರ ಅನುಭವ, ಆಡಳಿತ ಕೌಶಲ್ಯ ಮತ್ತು ದೂರದೃಷ್ಟಿ ಅಗತ್ಯವಾಗಿದೆ. ರಾಜ್ಯದ ನೆಲ, ಜಲ, ಭಾಷೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಆದ್ದರಿಂದ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರಣ್ಣ ಬಳಗಾನೂರ ಮಾತನಾಡಿ, ಮೊದಲ ಸಚಿವ ಸಂಪುಟದಲ್ಲಿ ಎಚ್.ಕೆ. ಪಾಟೀಲ ಅವರ ಹೆಸರಿಲ್ಲದಿರುವುದು ಆಶ್ಚರ್ಯ ಹಾಗೂ ನೋವು ತಂದಿದೆ ಎಂದರು. ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಅವಿರತವಾಗಿ ಶ್ರಮಿಸಿರುವ ಅವರು ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. 1986ರಿಂದ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಪಕ್ಷದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿರುವ ನಾಯಕರಿಗೆ ಸಚಿವ ಸ್ಥಾನ ದೊರಕಬೇಕಿತ್ತು ಎಂದು ಹೇಳಿದರು.

ರಾಜ್ಯ ರಾಜಕಾರಣದಲ್ಲಿ ಅನುಭವಸಂಪನ್ನ ನಾಯಕರಾಗಿರುವ ಎಚ್.ಕೆ. ಪಾಟೀಲ ಅವರು 1993ರಿಂದ ಈವರೆಗೆ ಜವಳಿ, ನೀರಾವರಿ, ಕಾನೂನು, ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ಹಲವಾರು ಪ್ರಮುಖ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ತಮ್ಮ ಆಡಳಿತಾವಧಿಯಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಜನತೆಯ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಇಂತಹ ಸಮರ್ಥ ಮತ್ತು ಜನಪರ ನಾಯಕರನ್ನು ಸಚಿವ ಸಂಪುಟದಿಂದ ಹೊರಗಿಡುವುದು ಅನ್ಯಾಯವಾಗಿದ್ದು, ಮುಂದಿನ ವಿಸ್ತರಣೆಯಲ್ಲಾದರೂ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರವಿ ಮೂಲಿಮನಿ ಮಾತನಾಡಿ, ಗ್ರಾಮೀಣ ಜನರ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಎಚ್.ಕೆ. ಪಾಟೀಲ ಅವರು ಪ್ರಮುಖ ಪ್ರೇರಣೆಯಾಗಿದ್ದರು ಎಂದು ಸ್ಮರಿಸಿದರು. ಮಹಾತ್ಮ ಗಾಂಧೀಜಿ ಕನಸು ಕಂಡ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಬಡವರ, ರೈತರ ಹಾಗೂ ಗ್ರಾಮೀಣ ಜನರ ಪರವಾಗಿ ಸದಾ ಧ್ವನಿಯಾಗಿರುವ ಇಂತಹ ದಿಟ್ಟ ಹಾಗೂ ಪ್ರಾಮಾಣಿಕ ನಾಯಕರಿಗೆ ಸಚಿವ ಸ್ಥಾನ ನೀಡುವುದು ಸರ್ಕಾರದ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಲವು ಮುಖಂಡರು, ಎಚ್.ಕೆ. ಪಾಟೀಲ ಅವರಂತಹ ಅನುಭವಿ ಮತ್ತು ಸ್ವಚ್ಛ ರಾಜಕಾರಣಿಯ ಅನುಭವ ರಾಜ್ಯ ಸರ್ಕಾರಕ್ಕೆ ಅಗತ್ಯವಾಗಿದೆ. ಗದಗ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪೂರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೀಲಮ್ಮ ಬೋಳನವರ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಅಶೋಕ ಮಂದಾಲಿ, ನಗರಸಭೆ ಸದಸ್ಯ ಬರಕತಅಲಿ ಮುಲ್ಲಾ, ಅನ್ವರ ನದಾಫ್, ಬಸವರಾಜ ಕಡೆಮನಿ, ಶಾಂತಣ್ಣ ಮುಳವಾಡ, ಬಿ.ಆರ್. ದೇವರಡ್ಡಿ, ವಿದ್ಯಾಧರ ದೊಡ್ಡಮನಿ, ಮಹಮ್ಮದ್ ಶಾಲಗಾರ, ಹುಲ್ಲಶ ಭಜಂತ್ರಿ, ಮಾಂತೇಶ ಮಡಿವಾಳರ, ಪರಪ್ಪ ಕಮತರ, ಅನೀಲ ಗರಗ, ಸರಫರಾಜ ಬಬರ್ಚಿ, ಮೋಹನ ದುರಗಣ್ಣವರ, ಜಾಕೀರ ಕುನ್ನಿಬಾವಿ, ಚಂದ್ರಪ್ಪ ಕರಿಕಟ್ಟಿ, ಸಮೀರ ಕೊಟ್ಟೂರ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಿಸಲು ಅಭಿಮಾನಿ ಬಳಗ ಸಜ್ಜಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande