
ದೇವನಹಳ್ಳಿ, 14 ಜೂನ್ (ಹಿ.ಸ.):
ಆ್ಯಂಕರ್:
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೇವನಹಳ್ಳಿ, ವಿಜಯಪುರ ಹಾಗೂ ತೂಬಗೆರೆ ಬ್ಲಾಕ್ಗಳ ಕಾಂಗ್ರೆಸ್ ಕಾರ್ಯಕರ್ತರ ಸಭೆ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ವಿಶೇಷ ತರಬೇತಿ ಶಿಬಿರ ಹಾಗೂ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಮತ್ತು ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಇಂದು ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ, ಪಕ್ಷದ ಸಂಘಟನಾ ಬಲವರ್ಧನೆಯಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು. ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೂ ತಲುಪಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದೇವನಹಳ್ಳಿ ಬ್ಲಾಕ್ ಅಧ್ಯಕ್ಷರಾಗಿ ಕೆ.ಸಿ. ಮಂಜುನಾಥ್, ವಿಜಯಪುರ ಬ್ಲಾಕ್ ಅಧ್ಯಕ್ಷರಾಗಿ ವೆಂಕಟೇಶ್ ಹಾಗೂ ತೂಬಗೆರೆ ಬ್ಲಾಕ್ ಅಧ್ಯಕ್ಷರಾಗಿ ರವಿ ಸಿದ್ದಪ್ಪ ಅವರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ಶುಭ ಹಾರೈಸಲಾಯಿತು. ಜೊತೆಗೆ ಮೂರು ಬ್ಲಾಕ್ಗಳ ವಿವಿಧ ಹಂತದ ಪದಾಧಿಕಾರಿಗಳು, ಸದಸ್ಯರು ಹಾಗೂ ಬಿಎಲ್ಎ-2 ಸದಸ್ಯರಿಗೆ ನೇಮಕಾತಿ ಆದೇಶ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಕ್ಷದ ಬಿಎಲ್ಎ-2 ಸದಸ್ಯರು ಹಾಗೂ ಕಾರ್ಯಕರ್ತರು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ಯಾವುದೇ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ವಿಶೇಷ ಕಾಳಜಿ ವಹಿಸಬೇಕು ಎಂದು ಮುನಿಯಪ್ಪ ಸೂಚಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಬ್ಲಾಕ್ ಅಧ್ಯಕ್ಷರಾದ ರವಿ ಸಿದ್ದಪ್ಪ, ಕೆ.ಸಿ. ಮಂಜುನಾಥ್ ಮತ್ತು ವೆಂಕಟೇಶ್ ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು, ನಿರ್ದೇಶಕರು, ಮಹಿಳಾ ಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.