
ಗದಗ, 14 ಜೂನ್ (ಹಿ.ಸ.)
ಆ್ಯಂಕರ್:- ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗಡಿ ಭಾಗದ ಪ್ರಮುಖ ಗ್ರಾಮವಾದ ಬಾಲೇಹೊಸೂರು ಹಾಗೂ ಗದಗ ಜಿಲ್ಲೆಯ ಸೂರಣಗಿ ಗ್ರಾಮವನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವು ವರ್ಷಗಳಿಂದ ಹದಗೆಟ್ಟಿರುವ ರಸ್ತೆಯಿಂದ ನಿತ್ಯ ನರಕಯಾತನೆ ಅನುಭವಿಸುತ್ತಿರುವ ಜನರು, ರಸ್ತೆ ಕಾಮಗಾರಿ ಶೀಘ್ರ ಆರಂಭಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಬಾಲೇಹೊಸೂರು ಗ್ರಾಮವು ಲಕ್ಷ್ಮೇಶ್ವರ ತಾಲೂಕಿನ ಕೊನೆಯ ಗ್ರಾಮವಾಗಿದ್ದು, ಶಿಕ್ಷಣ, ಆರೋಗ್ಯ, ವ್ಯಾಪಾರ, ಉದ್ಯೋಗ ಹಾಗೂ ಸರ್ಕಾರಿ ಕೆಲಸಗಳಿಗಾಗಿ ಪ್ರತಿದಿನ ನೂರಾರು ಜನರು ಲಕ್ಷ್ಮೇಶ್ವರ ಪಟ್ಟಣಕ್ಕೆ ತೆರಳುತ್ತಾರೆ. ಹಾವೇರಿ ಜಿಲ್ಲೆಯ ಗಡಿ ಭಾಗದಿಂದ ಬಾಲೇಹೊಸೂರು ಮೂಲಕ ಗದಗ ಜಿಲ್ಲೆಯ ಸೂರಣಗಿ ಗ್ರಾಮದವರೆಗೆ ಸಾಗುವ ರಸ್ತೆ ಕಳೆದ ಹಲವು ದಶಕಗಳಿಂದ ಸಂಪೂರ್ಣ ಹದಗೆಟ್ಟಿದೆ.
ರಸ್ತೆಯುದ್ದಕ್ಕೂ ನಿರ್ಮಾಣವಾಗಿರುವ ಆಳವಾದ ತಗ್ಗು-ಗುಂಡಿಗಳಿಂದ ವಾಹನ ಸಂಚಾರ ದುಸ್ತರವಾಗಿದ್ದು, ಸಾರ್ವಜನಿಕರು ಜೀವ ಭಯದಲ್ಲೇ ಸಂಚರಿಸುವಂತಾಗಿದೆ.
ಗ್ರಾಮಸ್ಥರ ಹೇಳಿಕೆಯಂತೆ, ರಸ್ತೆ ಅಭಿವೃದ್ಧಿಗಾಗಿ ಸುಮಾರು ಒಂದೂವರೆ ವರ್ಷದ ಹಿಂದೆಯೇ ಏಳು ಕೋಟಿ ರೂಪಾಯಿ ಅನುದಾನ ಮಂಜೂರಾಗಿತ್ತು. ಕಾಮಗಾರಿ ಕೈಗೊಳ್ಳಲು ಎರಡು ಬಾರಿ ಟೆಂಡರ್ ಪ್ರಕ್ರಿಯೆಯೂ ನಡೆದಿತ್ತು. ಆದರೆ ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಇಲಾಖೆಗಳ ನಿರ್ಲಕ್ಷ್ಯದಿಂದ ಕಾಮಗಾರಿ ಆರಂಭವಾಗಿಲ್ಲ. ಸರ್ಕಾರ ಅನುದಾನ ಬಿಡುಗಡೆ ಮಾಡಿದರೂ ನೆಲಮಟ್ಟದಲ್ಲಿ ಯಾವುದೇ ಕೆಲಸ ಆರಂಭವಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹದಗೆಟ್ಟ ರಸ್ತೆಯಿಂದ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಕೆಸರುಮಯವಾಗುತ್ತಿದ್ದು, ವಾಹನಗಳು ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಜೀವದ ಹಂಗು ತೊರೆದು ಪ್ರಯಾಣಿಸಬೇಕಾಗುತ್ತಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಪರದಾಡುತ್ತಿದ್ದಾರೆ. ಗರ್ಭಿಣಿಯರು, ವೃದ್ಧರು ಹಾಗೂ ರೋಗಿಗಳು ಆಸ್ಪತ್ರೆ ತಲುಪುವ ಮುನ್ನವೇ ಸಂಕಷ್ಟ ಅನುಭವಿಸುವಂತಾಗಿದೆ.
ತುರ್ತು ವೈದ್ಯಕೀಯ ಪರಿಸ್ಥಿತಿಗಳಲ್ಲಿ ರಸ್ತೆ ಸಮಸ್ಯೆ ಇನ್ನಷ್ಟು ಗಂಭೀರವಾಗುತ್ತಿದೆ. ಹೃದಯಾಘಾತ, ಅಪಘಾತ ಹಾಗೂ ಹೆರಿಗೆ ಸಂದರ್ಭಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ. ಕೆಲವು ಸಂದರ್ಭಗಳಲ್ಲಿ ರೋಗಿಗಳು ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟ ಘಟನೆಗಳೂ ನಡೆದಿವೆ ಎಂದು ಗ್ರಾಮಸ್ಥರು ನೋವಿನಿಂದ ವಿವರಿಸಿದ್ದಾರೆ. ರಸ್ತೆಯ ದುಸ್ಥಿತಿಯಿಂದ ಅನೇಕ ಕುಟುಂಬಗಳು ತಮ್ಮ ಆತ್ಮೀಯರನ್ನು ಕಳೆದುಕೊಂಡಿರುವ ಉದಾಹರಣೆಗಳಿವೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಗ್ರಾಮಸ್ಥರು, ವಿವಿಧ ಸಂಘಟನೆಗಳು ಹಾಗೂ ಸ್ಥಳೀಯ ಮುಖಂಡರು ಹಲವು ಬಾರಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ರಸ್ತೆ ತಡೆ, ಪ್ರತಿಭಟನೆ, ಧರಣಿ ಸೇರಿದಂತೆ ಅನೇಕ ಹೋರಾಟಗಳನ್ನು ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜನಪ್ರತಿನಿಧಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ಗ್ರಾಮಕ್ಕೆ ಭೇಟಿ ನೀಡಿ ಭರವಸೆ ನೀಡುತ್ತಾರೆ. ಆದರೆ ಸಮಸ್ಯೆ ಪರಿಹರಿಸುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಯ ದುಸ್ಥಿತಿಯಿಂದ ಕೆಎಸ್ಆರ್ಟಿಸಿ ಬಸ್ ಸೇವೆಯೂ ಹಲವು ಬಾರಿ ಅಸ್ತವ್ಯಸ್ತಗೊಂಡಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವಾಗ ಬಸ್ಗಳು ಪದೇ ಪದೇ ಕೆಟ್ಟು ನಿಲ್ಲುತ್ತಿರುವ ಕಾರಣ ಚಾಲಕರು ಮತ್ತು ಅಧಿಕಾರಿಗಳು ಗ್ರಾಮಕ್ಕೆ ಬಸ್ ಸೇವೆ ನೀಡಲು ಹಿಂದೇಟು ಹಾಕಿದ್ದಾರೆ. ಕೆಲ ಸಂದರ್ಭಗಳಲ್ಲಿ ಬಸ್ ಸೇವೆಯನ್ನು ಸ್ಥಗಿತಗೊಳಿಸಿದ ಪರಿಣಾಮ ಗ್ರಾಮಸ್ಥರು ಇನ್ನಷ್ಟು ಸಂಕಷ್ಟ ಅನುಭವಿಸಿದ್ದಾರೆ.
ಇತ್ತೀಚೆಗೆ ಗ್ರಾಮಸ್ಥರು ಹಾಗೂ ಸ್ಥಳೀಯ ನಾಯಕರು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಇದರ ಫಲವಾಗಿ ಬಾಲೇಹೊಸೂರು-ಸೂರಣಗಿ ರಸ್ತೆ ಅಭಿವೃದ್ಧಿಗೆ ಸುಮಾರು ಏಳು ಕೋಟಿ ರೂಪಾಯಿ ಅನುದಾನ ಮಂಜೂರಾಗಿತ್ತು. ಆದರೂ ಕಾಮಗಾರಿ ಆರಂಭವಾಗದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕೆಲವು ವ್ಯಕ್ತಿಗಳ ಸ್ವಾರ್ಥ ಹಾಗೂ ವೈಯಕ್ತಿಕ ಹಿತಾಸಕ್ತಿಯಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ.
ಈ ಕುರಿತು ಯುವ ಕಾಂಗ್ರೆಸ್ ತಾಲೂಕು ಉಪಾಧ್ಯಕ್ಷ ರಾಜು ಬೆಂಚಳ್ಳಿ ಮಾತನಾಡಿ, “ನಾವು ಪ್ರತಿದಿನ ಅನುಭವಿಸುತ್ತಿರುವ ಕಷ್ಟವನ್ನು ಯಾರೂ ಅರ್ಥ ಮಾಡಿಕೊಳ್ಳುತ್ತಿಲ್ಲ. ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರಾದರೂ ಕಾಮಗಾರಿ ಆರಂಭವಾಗದಿರುವುದು ದುರಂತ. ಇನ್ನೂ ಕೆಲವೇ ದಿನಗಳಲ್ಲಿ ರಸ್ತೆ ಕಾಮಗಾರಿ ಆರಂಭವಾಗದಿದ್ದರೆ ಗ್ರಾಮಸ್ಥರೆಲ್ಲ ಸೇರಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಜನರ ಜೀವಕ್ಕೆ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಸರ್ಕಾರ ಹಾಗೂ ಜನಪ್ರತಿನಿಧಿಗಳೇ ನೇರ ಹೊಣೆಗಾರರಾಗುತ್ತಾರೆ” ಎಂದು ಎಚ್ಚರಿಸಿದರು.
ಬಾಲೇಹೊಸೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಲ್ಲಪ್ಪ ಸೂರಣಗಿ ಸೇರಿದಂತೆ ರಾಜು ಬೆಂಚಳ್ಳಿ, ಕೊಟೆಪ್ಪ ಪೆದ್ದರ, ನಾಗರಾಜ ಬಂಡಿ, ಶಿವಪ್ಪ ಮುದಿಯಮ್ಮನವರ, ಮಲ್ಲೇಶ ಚಪ್ಪರಮನಿ ಹಾಗೂ ಗ್ರಾಮದ ಅನೇಕ ಮುಖಂಡರು ಮತ್ತು ಸಾರ್ವಜನಿಕರು ರಸ್ತೆ ಕಾಮಗಾರಿ ತಕ್ಷಣ ಆರಂಭಿಸುವಂತೆ ಒತ್ತಾಯಿಸಿದರು.
ಒಟ್ಟಾರೆ, ಅಭಿವೃದ್ಧಿಯ ಮಾತುಗಳು ಕೇಳಿಬರುತ್ತಿರುವ ಈ ಕಾಲಘಟ್ಟದಲ್ಲಿಯೂ ಬಾಲೇಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಮೂಲಭೂತ ರಸ್ತೆ ಸೌಲಭ್ಯಕ್ಕಾಗಿ ಹೋರಾಟ ನಡೆಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಿ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP