12 ಪ್ರಕರಣಗಳ ಭೇದಿಸಿದ ಗದಗ ಪೊಲೀಸರು
ಉಂಟಾಗಿದೆ
ಫೋಟೋ


ಗದಗ, 14 ಜೂನ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳನ್ನು ಎಸಗಿದ್ದ ಅಂತರ್ ಜಿಲ್ಲಾ ಮನೆಗಳ್ಳರ ತಂಡವನ್ನು ಬಂಧಿಸುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ಗದಗ ಸೇರಿದಂತೆ ಡಾವಣಗೇರಿ, ಕೊಪ್ಪಳ ಮತ್ತು ಧಾರವಾಡ ಜಿಲ್ಲೆಗಳಲ್ಲಿ ನಡೆದ ಒಟ್ಟು 12 ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ಮನೆ ಕಳ್ಳತನ ಪ್ರಕರಣಗಳು, ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣಗಳು, ರೋಣ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ಹಾಗೂ ಶಿರಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು ಎಂಟು ರಾತ್ರಿ ಮನೆ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಕೇವಲ 20 ದಿನಗಳ ಅಂತರದಲ್ಲಿ ಸರಣಿ ಕಳ್ಳತನಗಳು ನಡೆದಿದ್ದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಲ್ಲಿ ಆತಂಕ ಮತ್ತು ಭಯದ ವಾತಾವರಣ ಉಂಟಾಗಿತ್ತು.

ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಜಿಲ್ಲೆಯ ವಿವಿಧ ಪ್ರಮುಖ ರಸ್ತೆಗಳು ಹಾಗೂ ಗಡಿಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ವಾಹನಗಳ ತಪಾಸಣೆ ನಡೆಸಲಾಯಿತು. ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ವಹಿಸಿ ಮಾಹಿತಿ ಸಂಗ್ರಹಿಸಲಾಯಿತು.

ತನಿಖೆಯ ವೇಳೆ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ಹನಮಂತ ಕುಂಚಿಕೊರವರ, ಮಾಂತೇಶ ಕುಂಚಿಕೊರವರ ಹಾಗೂ ದುರಗೇಶ ಅಲಿಯಾಸ್ ಗಿರೀಶ ಗುತ್ತಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 145 ಗ್ರಾಂ ತೂಕದ ಬಂಗಾರದ ಆಭರಣಗಳು, 332 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಹಾಗೂ ₹50 ಸಾವಿರ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರ ತನಿಖೆಯಲ್ಲಿ ಆರೋಪಿಗಳು ಗದಗ ಜಿಲ್ಲೆಯಷ್ಟೇ ಅಲ್ಲದೆ ಡಾವಣಗೇರಿ, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಗಳಲ್ಲಿಯೂ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಒಟ್ಟು 12 ಮನೆ ಕಳ್ಳತನ ಪ್ರಕರಣಗಳಲ್ಲಿ ಇವರ ಪಾತ್ರ ದೃಢಪಟ್ಟಿದ್ದು, ಹಲವಾರು ಕುಟುಂಬಗಳ ಕಳೆದುಹೋದ ಅಮೂಲ್ಯ ಆಭರಣಗಳು ಮತ್ತು ಹಣವನ್ನು ಮರಳಿ ಪಡೆಯಲು ಸಾಧ್ಯವಾಗಿದೆ.

ಸರಣಿ ಕಳ್ಳತನಗಳಿಂದ ಕಂಗಾಲಾಗಿದ್ದ ಗ್ರಾಮೀಣ ಪ್ರದೇಶದ ಜನರು ಆರೋಪಿಗಳ ಬಂಧನದಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗದಗ ಪೊಲೀಸರು ಕೈಗೊಂಡಿರುವ ತ್ವರಿತ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಶ್ಲಾಘಿಸಿದ್ದು, ಅವರ ಸೇವೆಯನ್ನು ಗುರುತಿಸಿ ಸೂಕ್ತ ಬಹುಮಾನ ಘೋಷಿಸಿದ್ದಾರೆ. ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಂದೆಯೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶಾಂತಿ ಮತ್ತು ಭದ್ರತೆ ಕಾಪಾಡಲು ಪೊಲೀಸ್ ಇಲಾಖೆ ಬದ್ಧವಾಗಿದ್ದು, ಸಾರ್ವಜನಿಕರು ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande