
ಬಾಗಲಕೋಟೆ, 15 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಕಚೇರಿಯಲ್ಲಿ ನಡೆದ ಚಪ್ಪಲಿ ಏಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಸಪ್ಪ ದೊಡ್ಡಮನಿ ಅವರನ್ನು ಬಂಧಿಸುವವರೆಗೆ ಬಿಟಿಡಿಎಯ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಬಳ್ಳಾರಿ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿರುವ ಘಟನೆ ಖಂಡನೀಯವಾಗಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಕ್ಷಣೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಬಿಟಿಡಿಎ ಕಚೇರಿಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಆದರೆ ಆರೋಪಿ ಬಂಧನವಾಗದಿರುವುದು ನೌಕರರಲ್ಲಿ ಅಸಮಾಧಾನ ಮೂಡಿಸಿದೆ. ಹೀಗಾಗಿ ತಕ್ಷಣವೇ ಆರೋಪಿಯನ್ನು ಬಂಧಿಸುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರನ್ನು ಭೇಟಿ ಮಾಡಿ ಮತ್ತೊಂದು ಪ್ರಕರಣ ದಾಖಲಿಸುವ ಬಗ್ಗೆ ಚರ್ಚಿಸಲಾಗುವುದು. ಸರ್ಕಾರಿ ನೌಕರರ ಮೇಲೆ ದೌರ್ಜನ್ಯ ಎಸಗುವವರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸಂಘದ ಪ್ರಮುಖ ಬೇಡಿಕೆಯಾಗಿದೆ ಎಂದು ಎಂ.ಬಿ. ಬಳ್ಳಾರಿ ಹೇಳಿದರು.
ಆರೋಪಿ ಬಂಧನವಾಗುವವರೆಗೆ ಬಿಟಿಡಿಎ ಕಚೇರಿಯ ಸೇವೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗುವ ಉದ್ದೇಶ ಸಂಘಕ್ಕಿಲ್ಲ, ಆದರೆ ನೌಕರರ ಸುರಕ್ಷತೆ ಮತ್ತು ಗೌರವ ಕಾಪಾಡಲು ಈ ಕ್ರಮ ಅನಿವಾರ್ಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಘಟನೆ ಕುರಿತು ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಬಿಟಿಡಿಎ ಸಿಬ್ಬಂದಿ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆಯೂ ಚರ್ಚಿಸಿದರು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande