
ವಿಜಯಪುರ, 15 ಜೂನ್ (ಹಿ.ಸ.) :
ಆಂಕರ್ : ಬಸವನಬಾಗೇವಾಡಿ ಕ್ಷೇತ್ರದ ಮುಳವಾಡ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 2025-26ನೇ ಸಾಲಿನ ಯೋಜನೆಯಡಿ ನೂತನ ಶಾದಿಮಹಲ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಶಿವಾನಂದ ಪಾಟೀಲ್ ನೆರವೇರಿಸಿದರು.
ಗ್ರಾಮದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಶಾದಿಮಹಲ್ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದ್ದು, ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಮದುವೆ, ಧಾರ್ಮಿಕ ಹಾಗೂ ನಾನಾ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವಂತೆ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ.
ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಮೂಲಸೌಕರ್ಯ ಹಾಗೂ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಮುಳವಾಡ ಗ್ರಾಮದ ಶಾದಿಮಹಲ್ ನಿರ್ಮಾಣದಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಶುಭ ಸಮಾರಂಭಗಳನ್ನು ಕಡಿಮೆ ವೆಚ್ಚದಲ್ಲಿ ನಡೆಸಲು ನೆರವಾಗಲಿದೆ. ಸಾರ್ವಜನಿಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಈ ಕಾಮಗಾರಿ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಸ್ಥಳೀಯ ಗಣ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿ ಕಾಮಗಾರಿಗೆ ಶುಭ ಹಾರೈಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande