
ಬಾಗಲಕೋಟೆ, 15 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ನವನಗರದ ಸೆಕ್ಟರ್-26ರಲ್ಲಿ ಖಿದ್ಮಾತ್ ಈ ಇಸನೀಯಟ್ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ ಶಾಸಕ ಉಮೇಶ್ ಮೇಟಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ರಕ್ತದಾನದ ಮಹತ್ವದ ಕುರಿತು ಮಾತನಾಡಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಇಂತಹ ಶಿಬಿರಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಶಾಸಕ ಉಮೇಶ್ ಮೇಟಿ, “ರಕ್ತದಾನವು ಜೀವದಾನಕ್ಕೆ ಸಮಾನವಾಗಿದೆ. ತುರ್ತು ಸಂದರ್ಭಗಳಲ್ಲಿ ನಮ್ಮಿಂದ ನೀಡುವ ರಕ್ತವು ಅನೇಕ ಅಮೂಲ್ಯ ಜೀವಗಳನ್ನು ಉಳಿಸಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.
ರಕ್ತದಾನವು ಕೇವಲ ಒಂದು ಸಾಮಾಜಿಕ ಸೇವೆಯಲ್ಲ, ಅದು ಮತ್ತೊಬ್ಬರ ಬದುಕಿಗೆ ಭರವಸೆ ನೀಡುವ ಮಹತ್ವದ ಕಾರ್ಯವಾಗಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರಗಳಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿಯಾಗಬೇಕು. ರಕ್ತದಾನದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡಿ, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕಿದೆ ಎಂದು ಅವರು ಹೇಳಿದರು.
ಖಿದ್ಮಾತ್ ಈ ಇಸನೀಯಟ್ ಫೌಂಡೇಶನ್ ವತಿಯಿಂದ ಆಯೋಜಿಸಿರುವ ಈ ಶಿಬಿರವು ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶ ಹೊಂದಿದ್ದು, ಹಲವಾರು ದಾನಿಗಳು ಉತ್ಸಾಹದಿಂದ ಪಾಲ್ಗೊಂಡು ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಫೌಂಡೇಶನ್ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಶಿಬಿರದ ಮೂಲಕ ಸಂಗ್ರಹವಾದ ರಕ್ತವು ಅಗತ್ಯವಿರುವ ರೋಗಿಗಳ ಜೀವ ಉಳಿಸುವ ಕಾರ್ಯಕ್ಕೆ ಬಳಕೆಯಾಗಲಿದೆ ಎಂದು ಆಯೋಜಕರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande