
ವಿಜಯಪುರ, 15 ಜೂನ್ (ಹಿ.ಸ.) :
ಆಂಕರ್ : ರಸ್ತೆ ಕಾಮಗಾರಿಗಳ ವಿಳಂಬಕ್ಕೆ ಶಾಸಕರನ್ನು ಹೊಣೆ ಮಾಡುವುದು ಸರಿಯಲ್ಲ, ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರರ ನಿರ್ಲಕ್ಷ್ಯವೇ ಇದಕ್ಕೆ ಪ್ರಮುಖ ಕಾರಣ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದರು.
ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕರಿಗೆ ತೊಂದರೆ ಉಂಟಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಮಂಜೂರಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ ಗುತ್ತಿಗೆ ಪಡೆದ ಕೆಲವರು ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸದೆ ವಿಳಂಬ ಮಾಡುತ್ತಿದ್ದಾರೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದ್ದು, ಇದಕ್ಕೆ ಶಾಸಕರನ್ನು ದೂರುವುದು ಸರಿಯಲ್ಲ ಎಂದು ಹೇಳಿದರು.
ಕಾಮಗಾರಿಗಳ ಗುಣಮಟ್ಟ ಹಾಗೂ ವೇಗದ ಬಗ್ಗೆ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು. ಗುತ್ತಿಗೆ ಒಪ್ಪಂದದ ನಿಯಮಗಳನ್ನು ಪಾಲಿಸದ ಹಾಗೂ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಅಭಿವೃದ್ಧಿ ಕಾಮಗಾರಿಗಳು ಜನರ ಸಂಚಾರಕ್ಕೆ ಅನುಕೂಲವಾಗುವ ಉದ್ದೇಶದಿಂದ ಕೈಗೊಳ್ಳಲಾಗಿದ್ದು, ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸುವುದು ಅಗತ್ಯವಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ತೋರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಅಪ್ಪಾಜಿ ನಾಡಗೌಡ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande