
ವಿಜಯಪುರ, 15 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ನಗರದಲ್ಲಿ ಜೈ ಭೀಮ್ ಬೆಳಕು ಪ್ರಶಿಷ್ಟ ಜಾತಿ ಕನ್ನಡ ಸ್ವಾಭಿಮಾನಳಗ ಕ್ರಾಂತಿದಳ ಸೇವಾ ಸಂಸ್ಥೆ ವತಿಯಿಂದ ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಸಂಸ್ಥೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಶಿವಾನಂದ ಪಾಟೀಲ ಅವರು ಸತತವಾಗಿ ಶಾಸಕರಾಗಿ ಆಯ್ಕೆಯಾಗಿದ್ದು, ವಿಜಯಪುರ ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತರುವ ಉದ್ದೇಶದಿಂದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಬಸವನ ಬಾಗೇವಾಡಿ ಕ್ಷೇತ್ರದ ಅಭಿವೃದ್ಧಿ, ಜಿಲ್ಲೆಯ ಹಿತಾಸಕ್ತಿ ಹಾಗೂ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಶಿವಾನಂದ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲಾಗಿದೆ.
ಸಂಸ್ಥೆಯ ಮುಖಂಡರು ಮಾತನಾಡಿ, “ವಿಜಯಪುರ ಜಿಲ್ಲೆಗೆ ಸಮರ್ಪಕ ಪ್ರತಿನಿಧಿತ್ವ ದೊರೆಯಬೇಕು. ಜನರ ಆಶೋತ್ತರಗಳಿಗೆ ಸ್ಪಂದಿಸುವ ಅನುಭವಿ ನಾಯಕ ಶಿವಾನಂದ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ” ಎಂದು ಹೇಳಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande