ಲಕ್ಷ್ಮೇಶ್ವರ-ಶಿಗ್ಲಿ ಒಳರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ
ಗದಗ, 15 ಜೂನ್ (ಹಿ.ಸ.) : ಆ್ಯಂಕರ್ : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಲಕ್ಷ್ಮೇಶ್ವರ ಪಟ್ಟಣದ ಸವಣೂರು ರಸ್ತೆಯ ಬಿಸಿಎಂ ಕಟ್ಟಡದ ಹಿಂಭಾಗದಿಂದ ಶಿಗ್ಲಿ ಸಂಪರ್ಕಿಸುವ ಪ್ರಮುಖ ಒಳರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ರಸ
ಫೋಟೋ


ಗದಗ, 15 ಜೂನ್ (ಹಿ.ಸ.) :

ಆ್ಯಂಕರ್ : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಲಕ್ಷ್ಮೇಶ್ವರ ಪಟ್ಟಣದ ಸವಣೂರು ರಸ್ತೆಯ ಬಿಸಿಎಂ ಕಟ್ಟಡದ ಹಿಂಭಾಗದಿಂದ ಶಿಗ್ಲಿ ಸಂಪರ್ಕಿಸುವ ಪ್ರಮುಖ ಒಳರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಈ ರಸ್ತೆ ನಿರ್ಮಾಣದಿಂದ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹುಮಟ್ಟಿನ ಅನುಕೂಲವಾಗಲಿದ್ದು, ದಶಕಗಳ ಬೇಡಿಕೆ ಇದೀಗ ಈಡೇರುತ್ತಿರುವುದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡ ಚನ್ನಪ್ಪ ಜಗಲಿ, ಈ ರಸ್ತೆ ನಿರ್ಮಾಣವು ಕೇವಲ ಒಂದು ಅಭಿವೃದ್ಧಿ ಕಾಮಗಾರಿಯಲ್ಲ, ಬದಲಾಗಿ ಸಾವಿರಾರು ಜನರ ಸಂಚಾರದ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಮಹತ್ವದ ಯೋಜನೆಯಾಗಿದೆ ಎಂದು ಹೇಳಿದರು. ಶಿಗ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಲಕ್ಷ್ಮೇಶ್ವರದ ಎಪಿಎಂಸಿ ಮಾರುಕಟ್ಟೆಗೆ ಆಗಮಿಸುವ ರೈತರಿಗೆ ಈ ರಸ್ತೆ ನೇರ ಸಂಪರ್ಕ ಕಲ್ಪಿಸಲಿದೆ. ಇದರಿಂದ ಪಟ್ಟಣದ ಪ್ರಮುಖ ರಸ್ತೆಗಳ ಮೇಲಿನ ವಾಹನ ದಟ್ಟಣೆ ಕಡಿಮೆಯಾಗಲಿದ್ದು, ಸಂಚಾರ ಸುಗಮಗೊಳ್ಳಲಿದೆ ಎಂದು ತಿಳಿಸಿದರು.

ಅಲ್ಲದೆ, ಲಕ್ಷ್ಮೇಶ್ವರ ಮತ್ತು ಶಿಗ್ಲಿ ನಡುವಿನ ಪ್ರದೇಶದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಸುಲಭ ಸಂಚಾರ ವ್ಯವಸ್ಥೆ ದೊರೆಯಲಿದೆ. ಇದರಿಂದ ವಿದ್ಯಾರ್ಥಿಗಳ ಸಮಯ ಉಳಿತಾಯವಾಗುವುದರ ಜೊತೆಗೆ ಶಿಕ್ಷಣ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ನಂತರ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಈ ಭಾಗದ ಜನರ ಬಹುವರ್ಷಗಳ ಕನಸಾಗಿದ್ದ ರಸ್ತೆ ನಿರ್ಮಾಣ ಕಾರ್ಯಕ್ಕೆ ಇಂದು ಚಾಲನೆ ನೀಡುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು. ಮಳೆಗಾಲದ ಸಂದರ್ಭದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಅಸಾಧ್ಯವಾಗುತ್ತಿತ್ತು. ಪರಿಣಾಮವಾಗಿ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಮತ್ತು ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು ಎಂದು ನೆನಪಿಸಿದರು.

ರಸ್ತೆ ನಿರ್ಮಾಣದ ಅಗತ್ಯತೆಯನ್ನು ಮನಗಂಡು ಸರ್ಕಾರದ ಮಟ್ಟದಲ್ಲಿ ಅಗತ್ಯ ಅನುದಾನ ಮಂಜೂರು ಮಾಡಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ರಸ್ತೆ ಪೂರ್ಣಗೊಂಡ ಬಳಿಕ ಈ ಭಾಗದ ಅಭಿವೃದ್ಧಿಗೆ ಹೊಸ ಆಯಾಮ ದೊರೆಯಲಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ನಡುವಿನ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ ಎಂದು ಹೇಳಿದರು.

ಕಾಮಗಾರಿ ಕೈಗೊಳ್ಳುತ್ತಿರುವ ಗುತ್ತಿಗೆದಾರರು ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ರಸ್ತೆ ನಿರ್ಮಾಣವಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ಈ ರಸ್ತೆ ನಿರ್ಮಾಣದಿಂದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದ್ದು, ಸ್ಥಳೀಯ ವ್ಯಾಪಾರ-ವಹಿವಾಟು ವೃದ್ಧಿಯಾಗುವ ನಿರೀಕ್ಷೆಯಿದೆ. ಜೊತೆಗೆ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ, ಶಿಕ್ಷಣ ಹಾಗೂ ಸರ್ಕಾರಿ ಸೇವೆಗಳಿಗೆ ಸುಲಭ ಪ್ರವೇಶ ಸಿಗಲಿದ್ದು, ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್, ಜಿ.ಎಸ್. ಗಡ್ಡದ್ದೇವರಮಠ, ಎಂ.ಆರ್. ಪಾಟೀಲ್, ಜಾನು ಲಮಾಣಿ, ಮಲ್ಲೇಶಪ್ಪ ಲಮಾಣಿ, ಅನಿಲ ಮುಳುಗುಂದ, ಶಕ್ತಿ ಕತ್ತಿ, ಪರಮೇಶ ಲಮಾಣಿ, ಸಂತೋಷ ಜಾವೂರ, ಭೀಮಣ್ಣ ಯಂಗಾಡಿ, ದುಂಡೇಶ ಕೊಟಗಿ, ಗೌಡ ಪಾಟೀಲ್, ಪ್ರವೀಣ್ ಬೊಮ್ಮಲೆ, ಸತೀಶ ಕಾಡಣ್ಣನವರ, ವಿಶಾಲ ಬಟಗುರ್ಕಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande