
ಗದಗ, 15 ಜೂನ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿರುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಈ ನಿರ್ಧಾರದ ವಿರುದ್ಧ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಎಚ್.ಕೆ. ಪಾಟೀಲ್ ಅವರ ಹೆಸರನ್ನು ಕೈಬಿಟ್ಟಿರುವುದು ಜಿಲ್ಲೆಯ ಜನತೆ ಹಾಗೂ ಕಾರ್ಯಕರ್ತರಿಗೆ ನಿರಾಸೆ ಉಂಟುಮಾಡಿದ್ದು, ಈ ಹಿನ್ನೆಲೆಯಲ್ಲಿ ಜೂನ್ 16ರಂದು ಗದಗ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ವೈಯಕ್ತಿಕವಾಗಿ ಅಗತ್ಯವಿಲ್ಲ. ಆದರೆ ರಾಜ್ಯದ ಅಭಿವೃದ್ಧಿ ಮತ್ತು ಆಡಳಿತದ ದೃಷ್ಟಿಯಿಂದ ಅವರಂತಹ ಅನುಭವಿ, ದಕ್ಷ ಹಾಗೂ ಕಳಂಕರಹಿತ ನಾಯಕ ಸಚಿವ ಸಂಪುಟದಲ್ಲಿ ಇರಬೇಕಾದ ಅಗತ್ಯವಿದೆ ಎಂದು ಹೇಳಿದರು.
ರಾಜಕೀಯ ಜೀವನದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಸೇವೆ ಸಲ್ಲಿಸಿರುವ ಎಚ್.ಕೆ. ಪಾಟೀಲ್ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಗ್ರಾಮೀಣಾಭಿವೃದ್ಧಿ, ನೀರಾವರಿ, ಕಾನೂನು, ಪ್ರವಾಸೋದ್ಯಮ, ಜವಳಿ ಹಾಗೂ ಪಂಚಾಯತ್ ರಾಜ್ ಸೇರಿದಂತೆ ಹಲವು ಪ್ರಮುಖ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅನುಭವ ಅವರಿಗಿದೆ. ಇಂತಹ ಅನುಭವಿ ನಾಯಕರನ್ನು ಸಚಿವ ಸಂಪುಟದಿಂದ ಹೊರಗಿಡುವುದು ಸಮಂಜಸವಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಜೂನ್ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ಭೂಮರಡ್ಡಿ ವೃತ್ತ, ಮಹಾತ್ಮ ಗಾಂಧಿ ವೃತ್ತ, ಮಹೇಂದ್ರಕರ್ ವೃತ್ತ, ಟಾಂಗಾ ಕೂಟ, ಬಸವೇಶ್ವರ ವೃತ್ತ, ಪಂಚರ ಹೊಂಡ ಹಾಗೂ ಜೋಡ ಮಾರುತಿ ದೇವಸ್ಥಾನ ಮಾರ್ಗವಾಗಿ ಮುಳಗುಂದ ನಾಕಾವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿ.ಬಿ. ಅಸೂಟಿ ವಿವರಿಸಿದರು. ಈ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ರಾಜ್ಯದ ನೆಲ, ಜಲ, ಭಾಷೆ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅಪಾರವಾಗಿದೆ. ರೈತರು, ಗ್ರಾಮೀಣ ಜನತೆ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರಾಜ್ಯದ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ದೃಷ್ಟಿಕೋನ ಹೊಂದಿರುವ ನಾಯಕರಾಗಿರುವ ಕಾರಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ವರಿಷ್ಠರು ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರಣ್ಣ ಬಳಗಾನೂರ ಮಾತನಾಡಿ, ಮೊದಲ ಹಂತದ ಸಚಿವ ಸಂಪುಟದಲ್ಲಿ ಎಚ್.ಕೆ. ಪಾಟೀಲ್ ಅವರ ಹೆಸರಿಲ್ಲದಿರುವುದು ಅಚ್ಚರಿ ಮತ್ತು ಬೇಸರ ಉಂಟುಮಾಡಿದೆ. ಕಳೆದ ನಾಲ್ಕು ದಶಕಗಳಿಂದ ಪಕ್ಷದ ಸಂಘಟನೆಗಾಗಿ ದುಡಿಯುತ್ತಾ ಬಂದಿರುವ ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡದಿರುವುದು ನ್ಯಾಯಸಮ್ಮತವಲ್ಲ. ಅವರ ಸೇವಾ ಹಿರಿತನ, ಆಡಳಿತ ಅನುಭವ ಹಾಗೂ ಪಕ್ಷದ ನಿಷ್ಠೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕಾಗಿತ್ತು ಎಂದು ಹೇಳಿದರು.
1993ರಿಂದಲೇ ವಿವಿಧ ಇಲಾಖೆಗಳ ಜವಾಬ್ದಾರಿಯನ್ನು ನಿರ್ವಹಿಸಿರುವ ಎಚ್.ಕೆ. ಪಾಟೀಲ್ ಅವರು ರಾಜ್ಯದ ಜನತೆ ನೆನಪಿಡುವಂತಹ ಅನೇಕ ಯೋಜನೆಗಳನ್ನು ನೀಡಿದ್ದಾರೆ. ವಿಶೇಷವಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಅವರು ಕೈಗೊಂಡ ಸುಧಾರಣೆಗಳು ರಾಜ್ಯಾದ್ಯಂತ ಮಾದರಿಯಾಗಿವೆ. ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಜನಸ್ನೇಹಿ ಆಡಳಿತಕ್ಕಾಗಿ ಶ್ರಮಿಸಿದ ಇಂತಹ ನಾಯಕರಿಗೆ ಸಚಿವ ಸ್ಥಾನ ನೀಡದಿರುವುದು ರಾಜ್ಯಕ್ಕೆ ಆಗುವ ನಷ್ಟವಾಗಿದೆ ಎಂದು ಅಭಿಪ್ರಾಯಪಟ್ಟರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಮೂಲಿಮನಿ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಉತ್ತೇಜನ ನೀಡಿದ ಪ್ರಮುಖ ನಾಯಕರಲ್ಲಿ ಎಚ್.ಕೆ. ಪಾಟೀಲ್ ಒಬ್ಬರು. ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಅವರು ನಿರಂತರವಾಗಿ ಶ್ರಮಿಸಿದ್ದಾರೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದ ಅವರ ಸೇವೆಯನ್ನು ಸರ್ಕಾರ ಗೌರವಿಸಬೇಕು ಎಂದು ಹೇಳಿದರು.
ಎಚ್.ಕೆ. ಪಾಟೀಲ್ ಅವರು ಸದಾ ಅಭಿವೃದ್ಧಿ ಪರ ರಾಜಕಾರಣಕ್ಕೆ ಒತ್ತು ನೀಡಿದ್ದು, ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಹೆಸರಾಗಿದ್ದಾರೆ. ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳಲ್ಲಿ ಧ್ವನಿ ಎತ್ತಿರುವ ಅವರು, ಆಡಳಿತದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇಂತಹ ನಾಯಕನಿಗೆ ಸಚಿವ ಸ್ಥಾನ ನೀಡುವ ಮೂಲಕ ಸರ್ಕಾರ ಸೂಕ್ತ ಗೌರವ ಸಲ್ಲಿಸಬೇಕು ಎಂಬುದು ಜಿಲ್ಲೆಯ ಜನರ ಆಶಯವಾಗಿದೆ ಎಂದು ಮುಖಂಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪೂರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೀಲಮ್ಮ ಬೋಳನವರ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ನಗರಸಭೆ ಸದಸ್ಯ ಮುಳವಾಡ, ಬರಕತ್ ಅಲಿ ಮುಲ್ಲಾ, ಅನ್ವರ್ ನದಾಫ್, ಬಸವರಾಜ ಕಡೆಮನಿ, ಶಾಂತಣ್ಣ ದೇವರಡ್ಡಿ, ವಿದ್ಯಾಧರ ದೊಡ್ಡಮನಿ, ಮಹಮ್ಮದ್ ಶಾಲಗಾರ, ಹುಲ್ಲೇಶ್ ಭಜಂತ್ರಿ, ಮಾಂತೇಶ ಮಡಿವಾಳರ, ಪರಪ್ಪ ಕಮತರ, ಅನೀಲ ಗರಗ, ಸರಫರಾಜ್ ಬಬರ್ಚಿ, ಮೋಹನ ದುರಗಣ್ಣವರ, ಜಾಕೀರ್ ಕುನ್ನಿಬಾವಿ, ಚಂದ್ರಪ್ಪ ಕರಿಕಟ್ಟಿ, ಸಮೀರ್ ಕೊಟ್ಟೂರ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಚಿವ ಸಂಪುಟದಲ್ಲಿ ಎಚ್.ಕೆ. ಪಾಟೀಲ್ ಅವರಿಗೆ ಸ್ಥಾನ ನೀಡುವಂತೆ ಆಗ್ರಹಿಸಿ ಗದಗದಲ್ಲಿ ನಡೆಯಲಿರುವ ಈ ಪ್ರತಿಭಟನೆ ಇದೀಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಪಕ್ಷದ ಹೈಕಮಾಂಡ್ ಈ ಬೇಡಿಕೆಗೆ ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎಂಬುದರತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP