
ಬೆಂಗಳೂರು, 15 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮೃತರ ಬ್ಯಾಂಕ್ ಖಾತೆಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರೆಂಟಿ ಅನುಷ್ಠಾನ ಸಮಿತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಹಗರಣಗಳ ಗೂಡಾಗಿವೆ ಎಂದು ಆರೋಪಿಸಿರುವ ಅವರು, ರಾಜ್ಯದಾದ್ಯಂತ ಲಕ್ಷಾಂತರ ಮೃತರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವುದು ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ರಚಿಸಲಾದ ಗ್ಯಾರೆಂಟಿ ಅನುಷ್ಠಾನ ಸಮಿತಿಗಳಿಗೆ ಲಕ್ಷಾಂತರ ರೂಪಾಯಿ ಸಂಬಳ, ಭತ್ಯೆ ಹಾಗೂ ವಾಹನ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೆ ಇಂತಹ ದೊಡ್ಡ ಪ್ರಮಾಣದ ಅಕ್ರಮ ನಡೆಯುತ್ತಿದ್ದರೂ ಸಮಿತಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗುತ್ತಿದ್ದರೂ ಸಮಿತಿಗಳು ಮೌನ ವಹಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಈ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂದು ಆರೋಪಿಸಿದ ಅಶೋಕ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಹೆಸರಿನಲ್ಲಿ ಸಾರ್ವಜನಿಕರ ಹಣ ಪೋಲಾಗುತ್ತಿದೆ ಎಂದು ಹೇಳಿದ್ದಾರೆ.
ಗ್ಯಾರೆಂಟಿ ಅನುಷ್ಠಾನ ಸಮಿತಿಗಳನ್ನು ತಕ್ಷಣವೇ ರದ್ದುಗೊಳಿಸಬೇಕು. ಅಲ್ಲದೆ ಇದುವರೆಗೆ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ ಪಾವತಿಸಲಾದ ಸಂಬಳ, ಭತ್ಯೆ ಹಾಗೂ ಇತರ ಸವಲತ್ತುಗಳ ಮೊತ್ತವನ್ನು ವಾಪಸ್ ವಸೂಲಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಉದ್ದೇಶಿಸಿ ಮಾತನಾಡಿರುವ ಅಶೋಕ್, ಗ್ಯಾರೆಂಟಿ ಅನುಷ್ಠಾನ ಸಮಿತಿಗಳ ಮೂಲಕ ಪಕ್ಷದ ಕಾರ್ಯಕರ್ತರಿಗೆ ಸರ್ಕಾರಿ ವೆಚ್ಚದಲ್ಲಿ ಸೌಲಭ್ಯ ಕಲ್ಪಿಸುವ ಪರಿಪಾಠವನ್ನು ನಿಲ್ಲಿಸಬೇಕು. ಸಾರ್ವಜನಿಕರ ತೆರಿಗೆ ಹಣದ ದುರುಪಯೋಗ ಮುಂದುವರಿದರೆ ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಅದರ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.