
ಬೆಂಗಳೂರು, 16 ಜೂನ್ (ಹಿ.ಸ.) :
ಆ್ಯಂಕರ್ : ಆರ್.ಎಸ್.ಎಸ್ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ದೇಶಭಕ್ತ ಸಂಘಟನೆಯಾದ ಆರ್.ಎಸ್.ಎಸ್ ದೇಶನಿಷ್ಠೆಯನ್ನು ಪ್ರಶ್ನಿಸುವ ನೈತಿಕ ಹಕ್ಕು ಕಾಂಗ್ರೆಸ್ಗೆ ಇಲ್ಲ ಎಂದು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ದೇಶ ವಿಭಜನೆಗೆ ಕಾರಣವಾದ ಮುಸ್ಲಿಂ ಲೀಗ್ನಂತಹ ಸಂಘಟನೆಗಳೊಂದಿಗೆ ರಾಜಕೀಯ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷವು ಆರ್ಎಸ್ಎಸ್ ಬಗ್ಗೆ ಮಾತನಾಡುವುದು ವಿಪರ್ಯಾಸ ಎಂದು ಅವರು ಹೇಳಿದ್ದಾರೆ.
ವಿಧಾನ ಸೌಧದ ಮುಂದೆ ನಡೆದ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಪ್ರಕರಣವನ್ನು ಉಲ್ಲೇಖಿಸಿದ ಅಶೋಕ್, ಆ ವೇಳೆ ರಾಜ್ಯ ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ದೇಶವಿರೋಧಿ ಮನೋಭಾವದವರನ್ನು ಸಮರ್ಥಿಸುವವರು ಆರ್ಎಸ್ಎಸ್ನ ಕಾನೂನುಬದ್ಧತೆ ಹಾಗೂ ದೇಶಸೇವೆಯನ್ನು ಪ್ರಶ್ನಿಸುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.
ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನಕ್ಕಾಗಿ ಕಾಂಗ್ರೆಸ್ ಒಳರಾಜಕೀಯದಲ್ಲಿ ಪೈಪೋಟಿ ನಡೆಯುತ್ತಿದ್ದು, ಪ್ರಿಯಾಂಕ್ ಖರ್ಗೆ ಅವರು ಪಕ್ಷದ ಹೈಕಮಾಂಡ್ ಗಮನ ಸೆಳೆಯುವ ಉದ್ದೇಶದಿಂದ ಆರ್.ಎಸ್.ಎಸ್ ವಿಚಾರವನ್ನು ಮುಂದಿಟ್ಟುಕೊಂಡಿದ್ದಾರೆ ಎಂದು ಅಶೋಕ್ ಆರೋಪಿಸಿದ್ದಾರೆ. 2028ರ ವಿಧಾನ ಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ರಾಜಕೀಯ ತಂತ್ರಗಾರಿಕೆಯ ಭಾಗವಾಗಿ ಈ ಹೇಳಿಕೆಗಳು ಬರುತ್ತಿವೆ ಎಂದು ಅವರು ಹೇಳಿದ್ದಾರೆ.
ಮಾಹಿತಿ ತಂತ್ರಜ್ಞಾನ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಜವಾಬ್ದಾರಿಗಳ ನಿರ್ವಹಣೆಯಲ್ಲಿ ಪ್ರಿಯಾಂಕ್ ಖರ್ಗೆ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅಶೋಕ್, ಅಭಿವೃದ್ಧಿ ವಿಚಾರಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಆರ್.ಎಸ್.ಎಸ್ ವಿಷಯವನ್ನು ನಿರಂತರವಾಗಿ ಪ್ರಸ್ತಾಪಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ರಾಜ್ಯದ ಪ್ರಬುದ್ಧ ಮತದಾರರು ಇಂತಹ ರಾಜಕೀಯ ತಂತ್ರಗಳನ್ನು ಅರ್ಥಮಾಡಿಕೊಂಡಿದ್ದು, ದೇಶವಿರೋಧಿ ಧೋರಣೆಗಳು ಹಾಗೂ ವಿಭಜನಾ ರಾಜಕಾರಣಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅಶೋಕ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.