ಜೆ.ಕೆ. ಫ್ಯಾಕ್ಟರಿ ವಿರುದ್ಧದ ಆರೋಪಗಳ ಕುರಿತು ಸಮಗ್ರ ತನಿಖೆ ; ತಹಶೀಲ್ದಾರ್ ಭರವಸೆ
ಬಾಗಲಕೋಟೆ, 16 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜೆ.ಕೆ. ಫ್ಯಾಕ್ಟರಿ ವಿರುದ್ಧ ರೈತರು ಮಾಡಿರುವ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಎಲ್ಲ ಹಂತಗಳಲ್ಲೂ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಧೋಳ ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯ್ಕ ಅವರು ಭರವಸೆ ನೀ
Protest


ಬಾಗಲಕೋಟೆ, 16 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜೆ.ಕೆ. ಫ್ಯಾಕ್ಟರಿ ವಿರುದ್ಧ ರೈತರು ಮಾಡಿರುವ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಎಲ್ಲ ಹಂತಗಳಲ್ಲೂ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಧೋಳ ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯ್ಕ ಅವರು ಭರವಸೆ ನೀಡಿದ್ದಾರೆ.

ಜೆ.ಕೆ. ಫ್ಯಾಕ್ಟರಿ ಎದುರು ರೈತರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ನಿರತ ರೈತರೊಂದಿಗೆ ಚರ್ಚೆ ನಡೆಸಿದ ತಹಶೀಲ್ದಾರ್ ಅವರು, ರೈತರ ಸಮಸ್ಯೆಗಳನ್ನು ಆಲಿಸಿ ಸಂಬಂಧಿಸಿದ ಇಲಾಖೆಗಳ ಮೂಲಕ ಪರಿಶೀಲನೆ ನಡೆಸುವ ಭರವಸೆ ನೀಡಿದರು.

ಕಾರ್ಖಾನೆಯಿಂದ ಉಂಟಾಗುತ್ತಿದೆ ಎನ್ನಲಾಗುತ್ತಿರುವ ವಾಯು ಮಾಲಿನ್ಯ, ನೀರಿನ ಗುಣಮಟ್ಟ, ವಾಹನಗಳ ಅತಿಯಾದ ಭಾರ ಸಾಗಣೆ ಸೇರಿದಂತೆ ಹಲವು ವಿಚಾರಗಳ ಕುರಿತು ರೈತರು ಆರೋಪಗಳನ್ನು ಮಾಡಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ವಾಯು ಮಾಲಿನ್ಯ ನಿಯಂತ್ರಣ ಇಲಾಖೆಯ ಹಿಂದಿನ ವರದಿ ಸಮರ್ಪಕವಾಗಿಲ್ಲ ಎಂಬ ರೈತರ ಆಕ್ಷೇಪದ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ವಿಜ್ಞಾನಿಗಳ ಸಹಕಾರದೊಂದಿಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಿದ್ದಾರೆ. ರೈತರಿಗೆ ಉಂಟಾಗಿರುವ ಸಮಸ್ಯೆಗಳ ವೈಜ್ಞಾನಿಕ ಅಧ್ಯಯನ ನಡೆಸಿ ವಾಸ್ತವಾಂಶದ ವರದಿ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ಅದೇ ರೀತಿ, ಕಾರ್ಖಾನೆಗೆ ಸಂಬಂಧಿಸಿದ ವಾಹನಗಳು ನಿಯಮ ಮೀರಿ ಅಧಿಕ ಭಾರ ಸಾಗಿಸುತ್ತಿರುವ ಆರೋಪದ ಕುರಿತು ಆರ್ಟಿಒ ಅಧಿಕಾರಿಗಳು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿಗಳು ರೈತರ ಸಮ್ಮುಖದಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಸೂಚಿಸಲಾಗಿದೆ.

ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ನ್ಯಾಯ ಒದಗಿಸಬೇಕು. ಬಾಧಿತ ರೈತರಿಗೆ ಕಾರ್ಖಾನೆ ಆಡಳಿತ ಮಂಡಳಿಯು ಸೂಕ್ತ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಹೇಳಿದರು.

ರೈತರಿಗೆ ನೀಡಿರುವ ಭರವಸೆಯಂತೆ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ತನಿಖಾ ವರದಿ ಸಲ್ಲಿಸಬೇಕು. ಸಮಸ್ಯೆಗಳ ಕುರಿತು ನಿರ್ಲಕ್ಷ್ಯ ತೋರದೆ ವಾಸ್ತವ ಸ್ಥಿತಿ ಪರಿಶೀಲಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ರೈತರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಆಡಳಿತವು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ ಅವರು, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಲು ರೈತರು ಸಹಕರಿಸುವಂತೆ ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande