ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲು ಸಿದ್ಧತೆ : ವಿಜಯೇಂದ್ರ
ಬೆಂಗಳೂರು, 16 ಜೂನ್ (ಹಿ.ಸ.) : ಆ್ಯಂಕರ್ : ಗೃಹಲಕ್ಷ್ಮೀ, ಗೃಹಜ್ಯೋತಿ ಸೇರಿದಂತೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ
Byv


ಬೆಂಗಳೂರು, 16 ಜೂನ್ (ಹಿ.ಸ.) :

ಆ್ಯಂಕರ್ : ಗೃಹಲಕ್ಷ್ಮೀ, ಗೃಹಜ್ಯೋತಿ ಸೇರಿದಂತೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, “ನನ್ನ ಹೆಂಡತಿಗೂ ಫ್ರೀ, ಕಾಕಾ ಪಾಟೀಲ್ಗೂ ಫ್ರೀ, ಮಹದೇವಪ್ಪ ನಿನಗೂ ಫ್ರೀ” ಎಂದು ಘೋಷಣೆಗಳನ್ನು ಕೂಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಭಾಗ್ಯ ಯೋಜನೆಗಳನ್ನು ಸ್ಥಗಿತಗೊಳಿಸಲು ನೆಪಗಳನ್ನು ಹುಡುಕುತ್ತಿದೆ ಎಂದು ಟೀಕಿಸಿದ್ದಾರೆ.

ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಜಿಎಸ್ಟಿ ಹಾಗೂ ಆದಾಯ ತೆರಿಗೆ ಮಾನದಂಡಗಳ ಹೆಸರಿನಲ್ಲಿ ಅನರ್ಹತೆಯ ಪಟ್ಟ ಕಟ್ಟುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ. ಯೋಜನೆಗಳ ಪರಿಷ್ಕರಣೆಯ ಹೆಸರಿನಲ್ಲಿ ಜನರನ್ನು ವಂಚಿಸುವ ಕೆಲಸ ಆರಂಭವಾಗಿದ್ದು, ಉಚಿತ ಯೋಜನೆಗಳಿಗೆ ತಿಲಾಂಜಲಿ ನೀಡುವ ಉದ್ದೇಶ ಸರ್ಕಾರಕ್ಕಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಖಜಾನೆ ಬರಿದಾಗಿದ್ದು, ವಿವಿಧ ತೆರಿಗೆಗಳು, ಶುಲ್ಕಗಳು ಹಾಗೂ ಬೆಲೆ ಏರಿಕೆಗಳ ಮೂಲಕ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕಲಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಸರ್ಕಾರ ತನ್ನ ಆರ್ಥಿಕ ವೈಫಲ್ಯವನ್ನು ಒಪ್ಪಿಕೊಳ್ಳುವ ಬದಲು ಗ್ಯಾರಂಟಿ ಯೋಜನೆಗಳನ್ನು ಕಡಿತಗೊಳಿಸಲು ಮುಂದಾಗಿದೆ ಎಂದು ಅವರು ಟೀಕಿಸಿದ್ದಾರೆ.

ಕುಂಟು ನೆಪಗಳನ್ನು ಮುಂದಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಅಥವಾ ದುರ್ಬಲಗೊಳಿಸುವ ಪ್ರಯತ್ನ ನಡೆದರೆ, ಜನರ ಪರವಾಗಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande