
ವಿಜಯಪುರ, 16 ಜೂನ್ (ಹಿ.ಸ.).
ಆಂಕರ್ : ವಿಜಯಪುರ ಜಿಲ್ಲೆಯಲ್ಲಿ ಉಂಟಾಗಿರುವ ಸರ್ವರ್ ಸಮಸ್ಯೆಯಿಂದ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಸರ್ಕಾರದ ವಿವಿಧ ಯೋಜನೆಗಳು, ಶಾಲಾ-ಕಾಲೇಜು ಪ್ರವೇಶ ಹಾಗೂ ಇತರೆ ಅಗತ್ಯ ಕೆಲಸಗಳಿಗೆ ಅವಶ್ಯಕವಾಗಿರುವ ಪ್ರಮಾಣ ಪತ್ರಗಳಿಗಾಗಿ ಜನರು ಪ್ರತಿದಿನ ತಹಸೀಲ್ದಾರ್ ಕಚೇರಿಗಳತ್ತ ಆಗಮಿಸುತ್ತಿದ್ದರೂ, ತಾಂತ್ರಿಕ ದೋಷದಿಂದ ಸೇವೆ ಪಡೆಯಲು ಸಾಧ್ಯವಾಗದೆ ನಿರಾಶೆಯಿಂದ ಮರಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮುಂಜಾನೆ ಸಮಯದಲ್ಲೇ ತಹಸೀಲ್ದಾರ್ ಕಚೇರಿಗಳ ಮುಂದೆ ಸಾರ್ವಜನಿಕರು ಸಾಲುಗಟ್ಟಿ ನಿಲ್ಲುತ್ತಿದ್ದು, ಕೆಲವರು ದಿನವಿಡೀ ಕಾದರೂ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ದೂರದ ಗ್ರಾಮಗಳಿಂದ ಬರುವ ರೈತರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ನಾಗರಿಕರು ಸಮಯ ಮತ್ತು ಹಣ ವ್ಯಯಿಸಿಕೊಂಡು ಕಚೇರಿಗಳಿಗೆ ಆಗಮಿಸುತ್ತಿದ್ದು, ಸರ್ವರ್ ಸಮಸ್ಯೆಯಿಂದ ಅವರ ಕೆಲಸಗಳು ವಿಳಂಬವಾಗುತ್ತಿವೆ.
ಪಡಿತರ ಚೀಟಿಗೆ ಜಾತಿ ಪ್ರಮಾಣ ಪತ್ರ ಲಿಂಕ್ ಮಾಡುವುದು ಕಡ್ಡಾಯವಾಗಿರುವುದು ಹಾಗೂ ಶಾಲಾ-ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಿಗೆ ಬೇಡಿಕೆ ಹೆಚ್ಚಾಗಿದೆ.
ಆದರೆ ಈ ಸಂದರ್ಭದಲ್ಲಿ ಸರ್ವರ್ ಕೈಕೊಟ್ಟಿರುವುದರಿಂದ ಸಾರ್ವಜನಿಕರ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ.
ತುರ್ತು ಅಗತ್ಯಗಳಿಗೆ ಪ್ರಮಾಣ ಪತ್ರ ಪಡೆಯಬೇಕಾದ ವಿದ್ಯಾರ್ಥಿಗಳು, ವಿದ್ಯಾರ್ಥಿವೇತನ ಅರ್ಜಿದಾರರು, ರೈತರು ಹಾಗೂ ವಿವಿಧ ಸರ್ಕಾರಿ ಸೌಲಭ್ಯಗಳ ಫಲಾನುಭವಿಗಳು ಪರದಾಡುವಂತಾಗಿದೆ.
ಹಲವು ಗಂಟೆಗಳ ಕಾಲ ಕಚೇರಿಗಳಲ್ಲಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸರ್ವರ್ ಸಮಸ್ಯೆಯನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರಿಗೆ ಯಾವುದೇ ಅಡಚಣೆಯಿಲ್ಲದೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸಮಸ್ಯೆ ಶೀಘ್ರದಲ್ಲೇ ಬಗೆಹರಿಯದಿದ್ದರೆ ಸಾರ್ವಜನಿಕರ ಆಕ್ರೋಶ ಹೆಚ್ಚಾಗುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande