
ಬಾಗಲಕೋಟೆ, 16 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ಅಲ್ಲಿ ವಿದ್ಯುತ್ ಕ್ಷೇತ್ರದ ಖಾಸಗೀಕರಣ ಕ್ರಮವನ್ನು ವಿರೋಧಿಸಿ ರೈತರು, ನೇಕಾರರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗದ ಜನರನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ನೇಕಾರರ ಸೇವಾ ಸಂಘ ಕರೆ ನೀಡಿದೆ.
ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡುವುದರಿಂದ ರೈತರು, ಸಣ್ಣ ಕೈಗಾರಿಕೆಗಳು, ನೇಕಾರರು ಹಾಗೂ ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳುವ ಸಾಧ್ಯತೆ ಇದೆ ಎಂದು ಸಂಘವು ಆತಂಕ ವ್ಯಕ್ತಪಡಿಸಿದ್ದು, ಸರ್ಕಾರ ಕೂಡಲೇ ಈ ಕ್ರಮವನ್ನು ಕೈಬಿಡಬೇಕು ಎಂದು ಒತ್ತಾಯಿಸಿದೆ.
ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ರಬಕವಿ ಬಸ್ ನಿಲ್ದಾಣದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಾಯಪೂರ್ವಕ ಮನವಿ ಸಲ್ಲಿಸಲಾಗುವುದು ಎಂದು ಸಂಘದ ರಾಜ್ಯ ಘಟಕ ತಿಳಿಸಿದೆ.
ಅದೇ ರೀತಿ ದಿ. 17-06-2026 ರಂದು ಮಹಾಲಿಂಗಪುರದಲ್ಲಿ ಹೋರಾಟದ ವೇದಿಕೆಯಿಂದ ಕೆಇಬಿ ಕಚೇರಿ ಎದುರು ಧರಣಿ ನಡೆಸಿ, ತಹಶೀಲ್ದಾರ್ ಅವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿದ್ಯುತ್ ಖಾಸಗೀಕರಣ ವಿರೋಧಿ ಹೋರಾಟಕ್ಕೆ ರೈತರು, ನೇಕಾರರು, ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕರ್ನಾಟಕ ರಾಜ್ಯ ನೇಕಾರರ ಸೇವಾ ಸಂಘ ಮನವಿ ಮಾಡಿದೆ.
“ಕಾರಣ ಬನ್ನಿ, ಬನ್ನಿ, ಬನ್ನಿ… ಪ್ರತಿಯೊಬ್ಬರೂ ಬನ್ನಿ. ನಿಗದಿತ ಸಮಯಕ್ಕೆ ಸರಿಯಾಗಿ ಆಗಮಿಸಿ ಹೋರಾಟವನ್ನು ಬಲಪಡಿಸಿ” ಎಂದು ಸಂಘದ ಪದಾಧಿಕಾರಿಗಳು ಕರೆ ನೀಡಿದ್ದಾರೆ.
ಈ ಕುರಿತು ಕರ್ನಾಟಕ ರಾಜ್ಯ ನೇಕಾರರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಜಿ. ತಿರಕಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದು, ವಿದ್ಯುತ್ ಕ್ಷೇತ್ರದ ರಕ್ಷಣೆ ಹಾಗೂ ಜನಸಾಮಾನ್ಯರ ಹಿತಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande