
ಬಾಗಲಕೋಟೆ, 17 ಜೂನ್ (ಹಿ.ಸ.) :
ಆಂಕರ್ : ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ವೇಳೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ನಗರಸಭೆ ಕಚೇರಿಗೆ ಬೀಗ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರ ವಿರುದ್ಧ ನಗರಸಭೆ ವತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ಇಳಕಲ್ಲ ನಗರದ ಲಕ್ಷ್ಮಿ ನಗರ ನಿವಾಸಿಗಳು ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಒತ್ತಾಯಿಸಿ ಜೂನ್ 9ರಂದು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾಕಾರರು ನಗರಸಭೆ ಕಚೇರಿಗೆ ಬೀಗ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಬಶೀರ್ ಕಮನಾಘರ್ ಅವರು ಇಳಕಲ್ಲ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ ಪ್ರತಿಭಟನಾಕಾರರು ಅವಾಚ್ಯ ಪದಗಳಿಂದ ನಿಂದಿಸಿದ್ದು, ಸರ್ಕಾರಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಒಂಬತ್ತು ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ, ನಗರಸಭೆ ಪೌರಾಯುಕ್ತರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ನಡೆದ ಪ್ರತಿಭಟನೆ ಇದೀಗ ಪೊಲೀಸ್ ಪ್ರಕರಣದ ಹಂತಕ್ಕೆ ತಲುಪಿದ್ದು, ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande