ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮುಧೋಳದಲ್ಲಿ ಹಿಂದು ಕ್ಷತ್ರೀಯ ಸಮಾಜದ ಪ್ರತಿಭಟನೆ
ರ್ಯಾಲಿ
Proyest


ಬಾಗಲಕೋಟೆ, 17 ಜೂನ್ (ಹಿ.ಸ.) :

ಆಂಕರ್ : ಪ್ರಭು ಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪ್ರೊ. ಕೆ.ಎಸ್. ಭಗವಾನ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದು ಕ್ಷತ್ರೀಯ ಸಮಾಜದ ವತಿಯಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಬಸವೇಶ್ವರ ವೃತ್ತದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ಈ ವೇಳೆ ಪ್ರತಿಭಟನಾಕಾರರು ಭಗವಾನ್ ಅವರ ಹೇಳಿಕೆಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಮಾಜದ ಮುಖಂಡರು, ಪ್ರೊ. ಕೆ.ಎಸ್. ಭಗವಾನ್ ಅವರು ಪದೇ ಪದೇ ಹಿಂದೂ ಧರ್ಮದ ಆರಾಧ್ಯ ದೈವ ಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಇಂತಹ ಹೇಳಿಕೆಗಳು ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತವೆ. ಹೀಗಾಗಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ವೇಳೆ ಕೆಲವರು ಭಗವಾನ್ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಪ್ರತಿಕೃತಿಗೆ ಬೆಂಕಿ ಹಚ್ಚಿ ತಮ್ಮ ವಿರೋಧ ವ್ಯಕ್ತಪಡಿಸಿದರು.

“ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸಲಾಗುವುದು. ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ” ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿಂದೂ ಧರ್ಮದ ಭಾವನೆಗಳಿಗೆ ಗೌರವ ನೀಡಬೇಕು. ದೇವರುಗಳ ಬಗ್ಗೆ ಹಗುರವಾಗಿ ಮಾತನಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.

ಒಂದು ವಾರದೊಳಗೆ ಭಗವಾನ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಸೇರಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು.

ಈ ಹಿಂದೆ 2018ರಲ್ಲಿಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಸಂದರ್ಭದಲ್ಲಿ ಕ್ರಮಕ್ಕೆ ಒತ್ತಾಯಿಸಲಾಗಿತ್ತು. ಆದರೂ ಯಾವುದೇ ಕಠಿಣ ಕ್ರಮ ಆಗಿಲ್ಲ. ಸರ್ಕಾರ ಈ ಬಾರಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಂತರ ತಹಶೀಲ್ದಾರ್ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಹಿಂದು ಕ್ಷತ್ರೀಯ ಸಮಾಜದ ತಾಲೂಕು ಅಧ್ಯಕ್ಷ ದಯಾನಂದ ಪೂಜಾರಿ, ಅಕ್ಷಯ ನಾಯಕ, ರಾಜಕುಮಾರ ಜಂಬಗಿ, ಬಸು ಪೂಜೇರಿ, ಗಾಳೆಪ್ಪ ಪೂಜೇರಿ, ಸಿದ್ದು ನಾಯ್ಕ್, ಪ್ರಕಾಶ ನಾಯ್ಕ್, ಶ್ರೀಕಾಂತ್ ಪೂಜೇರಿ, ವೆಂಕಣ್ಣ ಬಡೆನ್ನವರ, ಮಾರುತಿ ಪೂಜೇರಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande