
ಗದಗ, 17 ಜೂನ್ (ಹಿ.ಸ.) :
ಆ್ಯಂಕರ್ : ಕಳೆದ ಎರಡು ತಿಂಗಳಿಂದ ಸಮರ್ಪಕ ಕುಡಿಯುವ ನೀರಿನ ಪೂರೈಕೆಯಾಗದೇ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದೆ. ಹನಿ ಹನಿ ನೀರಿಗಾಗಿ ಪರದಾಡುತ್ತಿರುವ ನಿವಾಸಿಗಳು ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಪೊರಕೆ, ಖಾಲಿ ಕೊಡಗಳು ಹಾಗೂ ಜಾನುವಾರುಗಳೊಂದಿಗೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಲಕ್ಷ್ಮೇಶ್ವರ ಪಟ್ಟಣದ 23 ವಾರ್ಡ್ಗಳಲ್ಲಿ ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತುಂಗಭದ್ರಾ ನದಿಯಿಂದ ಪಟ್ಟಣಕ್ಕೆ ಸರಬರಾಜಾಗುವ ನೀರಿನ ಪೈಪ್ಲೈನ್ ದುರಸ್ತಿ ಕಾಮಗಾರಿ ನಡೆಯುತ್ತಿರುವ ಕಾರಣ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದರೂ, ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ಪುರಸಭೆ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.
ನೀರಿನ ಸಮಸ್ಯೆಯಿಂದ ಬಳಲಿದ ಸಾರ್ವಜನಿಕರು ದೂದಪೀರಾ ನಾನಾ ದರ್ಗಾದಿಂದ ಪುರಸಭೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನೆಯಲ್ಲಿ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದುಕೊಂಡು ಭಾಗವಹಿಸಿದರೆ, ಕೆಲವರು ಪೊರಕೆಗಳನ್ನು ಪ್ರದರ್ಶಿಸಿ ಪುರಸಭೆಯ ಕಾರ್ಯವೈಖರಿಯನ್ನು ಖಂಡಿಸಿದರು. ವಿಶೇಷವಾಗಿ ಜಾನುವಾರುಗಳು ಹಾಗೂ ಮೇಕೆಗಳನ್ನು ಕರೆತಂದು ಪುರಸಭೆ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಮಾತನಾಡಿ, ಎರಡು ತಿಂಗಳಿನಿಂದ ಕುಡಿಯುವ ನೀರಿನ ಪೂರೈಕೆಯಿಲ್ಲದೆ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಮನೆ ಬಳಕೆಗೆ ಮಾತ್ರವಲ್ಲದೆ ಜಾನುವಾರುಗಳಿಗೂ ನೀರು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಬಾರಿ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಇದಲ್ಲದೆ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಮಾತ್ರವಲ್ಲದೆ ಬೀದಿ ದೀಪಗಳ ಕೊರತೆ, ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯ ಸಮಸ್ಯೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಕೊರತೆಯೂ ಕಾಡುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು. ಲಕ್ಷ್ಮೇಶ್ವರ ಪಟ್ಟಣದ ಜನಸಂಖ್ಯೆ ಸುಮಾರು 70 ಸಾವಿರಕ್ಕೂ ಅಧಿಕವಾಗಿದ್ದರೂ, ಇಂತಹ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸಿಗದಿರುವುದು ದುರಂತಕರ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ವೇಳೆ ಪುರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ ಸಾರ್ವಜನಿಕರು, ಜನರ ಸಂಕಷ್ಟಗಳಿಗೆ ಸ್ಪಂದಿಸದ ಆಡಳಿತ ವ್ಯವಸ್ಥೆಯನ್ನು ತೀವ್ರವಾಗಿ ಖಂಡಿಸಿದರು. ನೀರಿನ ಸಮಸ್ಯೆ ಇಷ್ಟೊಂದು ಗಂಭೀರವಾಗಿದ್ದರೂ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು. ಶಾಸಕ ಡಾ. ಚಂದ್ರು ಲಮಾಣಿ ಸೇರಿದಂತೆ ಜಿಲ್ಲಾಡಳಿತ ಕೂಡ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸಾರ್ವಜನಿಕರ ಪ್ರಕಾರ, ನೀರಿನ ಅಭಾವದಿಂದ ದಿನನಿತ್ಯದ ಜೀವನ ದುಸ್ತರವಾಗಿದ್ದು, ಖಾಸಗಿ ಟ್ಯಾಂಕರ್ಗಳ ಮೊರೆ ಹೋಗುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೂ ಒಳಗಾಗಿವೆ. ನೀರಿನ ಸಮಸ್ಯೆ ಮುಂದುವರಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಒಟ್ಟಾರೆ, ಲಕ್ಷ್ಮೇಶ್ವರ ಪಟ್ಟಣದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಬಿಕ್ಕಟ್ಟು ಜನರ ಸಹನೆಯನ್ನು ಮೀರಿ ಹೋಗಿದ್ದು, ಜನ-ಜಾನುವಾರುಗಳೊಂದಿಗೆ ನಡೆದ ಈ ಪ್ರತಿಭಟನೆ ಆಡಳಿತ ವ್ಯವಸ್ಥೆಗೆ ಎಚ್ಚರಿಕೆಯ ಗಂಟೆಯಾಗಿದೆ. ಇನ್ಮುಂದಾದರೂ ಜಿಲ್ಲಾಡಳಿತ ಹಾಗೂ ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ತುರ್ತು ಕ್ರಮ ಕೈಗೊಂಡು ಪಟ್ಟಣದ ಜನರಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP