
ಬೆಂಗಳೂರು, 18 ಜೂನ್ (ಹಿ.ಸ.) :
ಆ್ಯಂಕರ್ : ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ತೆರವಾಗಿರುವ ಏಳು ಸ್ಥಾನಗಳ ಭರ್ತಿಗಾಗಿ ಇಂದು ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಚುನಾವಣಾಧಿಕಾರಿಗಳು ಪೂರ್ಣಗೊಳಿಸಿದ್ದಾರೆ.
ವಿಧಾನ ಸೌಧದ ಮೊದಲ ಮಹಡಿಯಲ್ಲಿರುವ ಸಮಿತಿ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕೇಂದ್ರದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಗಮ ಮತ್ತು ಪಾರದರ್ಶಕ ಮತದಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮತದಾನ ನಡೆಯುವ ಸಭಾಂಗಣದ ಒಳಗೆ ಹಾಗೂ ಹೊರಭಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಂಪೂರ್ಣ ಪ್ರಕ್ರಿಯೆಯ ಮೇಲೆ ನಿಗಾ ವಹಿಸಲಾಗುತ್ತಿದೆ. ಶಾಸಕರ ಗೌಪ್ಯ ಮತದಾನಕ್ಕೆ ಅನುಕೂಲವಾಗುವಂತೆ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಇದೇ ವೇಳೆ, ಮತದಾನ ಕೇಂದ್ರದ ಸುತ್ತಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಹಾಗೂ ಯಾವುದೇ ಅಡಚಣೆಯಿಲ್ಲದೆ ನಡೆಯುವಂತೆ ಚುನಾವಣಾಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.