
ಬೆಂಗಳೂರು, 18 ಜೂನ್ (ಹಿ.ಸ.) :
ಆ್ಯಂಕರ್ : ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಕೆಲ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಈ ಕುರಿತು ಸಿಬಿಐ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಮೃತರ ಖಾತೆಗಳಿಗೆ ವರ್ಗಾವಣೆಯಾಗಿರುವುದು ಕೇವಲ ಆಡಳಿತಾತ್ಮಕ ಲೋಪವಲ್ಲ, ಸಾರ್ವಜನಿಕರ ತೆರಿಗೆ ಹಣದ ದುರುಪಯೋಗದ ಗಂಭೀರ ಪ್ರಕರಣವಾಗಿರಬಹುದು ಎಂದು ಅವರು ಆರೋಪಿಸಿದ್ದಾರೆ.
ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಗಳ ಕಾರ್ಯಕ್ಷಮತೆಯನ್ನು ಪ್ರಶ್ನಿಸಿರುವ ಅಶೋಕ್, ಇಂತಹ ಪ್ರಕರಣಗಳು ನಡೆಯುತ್ತಿದ್ದರೂ ಸಂಬಂಧಿತ ಸಮಿತಿಗಳು ಮತ್ತು ಅಧಿಕಾರಿಗಳು ಅಗತ್ಯ ನಿಗಾ ವಹಿಸಲು ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.
ಗ್ಯಾರೆಂಟಿ ಯೋಜನೆಗಳ ಪ್ರಚಾರ ಮತ್ತು ಅನುಷ್ಠಾನಕ್ಕಾಗಿ ಸರ್ಕಾರ ಭಾರಿ ಪ್ರಮಾಣದ ಸಾರ್ವಜನಿಕ ಹಣವನ್ನು ವೆಚ್ಚ ಮಾಡುತ್ತಿರುವ ಸಂದರ್ಭದಲ್ಲಿ ಮೃತರ ಖಾತೆಗಳಿಗೆ ಹಣ ಜಮೆಯಾಗಿರುವುದು ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಅವರು ಹೇಳಿದ್ದಾರೆ.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು, ಗ್ಯಾರೆಂಟಿ ಅನುಷ್ಠಾನ ಸಮಿತಿಗಳನ್ನು ವಿಸರ್ಜಿಸಬೇಕು ಹಾಗೂ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ ನೀಡಲಾಗಿರುವ ಸಂಬಳ ಹಾಗೂ ಭತ್ಯೆಗಳ ಕುರಿತು ಪರಿಶೀಲನೆ ನಡೆಸಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.
ಇದಲ್ಲದೆ, ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿರುವ ಹಣ ಯಾರಿಗೆ ತಲುಪಿದೆ ಮತ್ತು ಅದರ ಹಿಂದೆ ಯಾವುದೇ ಅಕ್ರಮ ಜಾಲವಿದೆಯೇ ಎಂಬುದನ್ನು ಪತ್ತೆಹಚ್ಚಲು ಕೇಂದ್ರ ತನಿಖಾ ದಳ (ಸಿಬಿಐ) ಮೂಲಕ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಸಾರ್ವಜನಿಕರ ಹಣದ ಬಳಕೆಯಲ್ಲಿ ಪಾರದರ್ಶಕತೆ ಕಾಪಾಡುವುದು ಸರ್ಕಾರದ ಹೊಣೆಗಾರಿಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.