
ನವದೆಹಲಿ, 18 ಜೂನ್ (ಹಿ.ಸ.) :
ಆ್ಯಂಕರ್ : ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಜಿಯೊ ಗೋರ್ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಭಾರತ ಮತ್ತು ಅಮೆರಿಕ ನಡುವಿನ ಭದ್ರತಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಚರ್ಚೆ ನಡೆಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಮಿತ್ ಶಾ, ಅಮೆರಿಕದ ರಾಯಭಾರಿ ಸರ್ಜಿಯೊ ಗೋರ್ ಅವರೊಂದಿಗೆ ವಿಶೇಷವಾಗಿ ಭಯೋತ್ಪಾದನೆ ವಿರುದ್ಧದ ಹೋರಾಟ ಹಾಗೂ ಮಾದಕ ದ್ರವ್ಯಗಳ ಕಳ್ಳಸಾಗಣೆ ತಡೆ ಕ್ಷೇತ್ರಗಳಲ್ಲಿ ಉಭಯ ರಾಷ್ಟ್ರಗಳ ಸಹಕಾರವನ್ನು ಇನ್ನಷ್ಟು ವಿಸ್ತರಿಸುವ ಕುರಿತು ಸುದೀರ್ಘ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಭಾರತ–ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಬದ್ಧವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ನಿರಂತರವಾಗಿ ವೃದ್ಧಿಯಾಗುತ್ತಿದ್ದು, ಅದರ ಲಾಭ ಎರಡೂ ದೇಶಗಳ ನಾಗರಿಕರಿಗೆ ದೊರೆಯಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದನೆ ನಿಗ್ರಹ, ಅಂತಾರಾಷ್ಟ್ರೀಯ ಅಪರಾಧ ಜಾಲಗಳ ವಿರುದ್ಧದ ಹೋರಾಟ, ಮಾದಕ ದ್ರವ್ಯಗಳ ಅಕ್ರಮ ಸಾಗಣೆ ತಡೆ ಹಾಗೂ ಭದ್ರತಾ ಸಹಕಾರದಂತಹ ಕ್ಷೇತ್ರಗಳಲ್ಲಿ ಭಾರತ ಮತ್ತು ಅಮೆರಿಕ ಹಲವು ವರ್ಷಗಳಿಂದ ನಿಕಟ ಸಹಯೋಗವನ್ನು ಹೊಂದಿವೆ. ಈ ಹಿನ್ನೆಲೆ ಸರ್ಜಿಯೊ ಗೋರ್ ಮತ್ತು ಅಮಿತ್ ಶಾ ಅವರ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸುವ ಮಹತ್ವದ ವಿದ್ಯಮಾನ ಎಂದು ಪರಿಗಣಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.