
ಬಾಗಲಕೋಟೆ, 18 ಜೂನ್ (ಹಿ.ಸ.) :
ಆಂಕರ್ : ಬಿಟಿಡಿಎ (ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ) ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಮಹಿಳಾ ಹೋರಾಟಗಾರರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದ ನವನಗರದಲ್ಲಿರುವ ಲೋಕಾಯುಕ್ತ ಕಚೇರಿ ಎದುರು ಜಮಾಯಿಸಿದ ಹೋರಾಟಗಾರರು, ಬಿಟಿಡಿಎ ವ್ಯಾಪ್ತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ಮಹಿಳಾ ಹೋರಾಟಗಾರರು ಲೋಕಾಯುಕ್ತ ಅಧಿಕಾರಿಗಳಿಗೆ ಚಪ್ಪಲಿ ತೋರಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಪ್ರಕರಣ ದಾಖಲಿಸುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.
ಬಿಟಿಡಿಎಗೆ ಸಂಬಂಧಿಸಿದ ಭೂಮಿ, ನಿವೇಶನ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಈ ಕುರಿತು ಲೋಕಾಯುಕ್ತ ಸಂಸ್ಥೆ ನಿರ್ಲಕ್ಷ್ಯ ವಹಿಸಬಾರದು ಎಂದು ಆಗ್ರಹಿಸಿದರು.
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಮನವಿಯನ್ನು ಅಧಿಕಾರಿಗಳಿಗೆ ಸಲ್ಲಿಸಿ, ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಡಿಎಸ್ಎಸ್ ಮುಖಂಡರು ಮಾತನಾಡಿ, “ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಪ್ರಕರಣ ದಾಖಲಿಸಬೇಕು. ಜನರ ಸಮಸ್ಯೆಗಳಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ” ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande