
ಕೊಪ್ಪಳ, 19 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಹೊಸ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಆಸಕ್ತಿ ಹೊಂದಿರುವ ಭಾವಿ ಉದ್ಯಮಿಗಳಿಗೆ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ) ಮಹತ್ವದ ಅವಕಾಶ ಕಲ್ಪಿಸಿದ್ದು, ಪರವಾನಗಿ ಹಾಗೂ ನಿರಾಕ್ಷೇಪಣಾ ಪತ್ರ (ಎನ್ಒಸಿ) ಪಡೆಯುವಲ್ಲಿ ಸಮಸ್ಯೆ ಎದುರಿಸುತ್ತಿರುವವರು ಅರ್ಜಿ ಸಲ್ಲಿಸುವಂತೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹೊಸ ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಸ್ಥಳೀಯ ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆ, ಜೆಸ್ಕಾಂ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಂದ ಎನ್ಒಸಿ, ಉದ್ಯಮ ಪರವಾನಗಿ ಹಾಗೂ ಕಟ್ಟಡ ಪರವಾನಗಿ ಪಡೆಯುವ ಸಂದರ್ಭದಲ್ಲಿ ಉಂಟಾಗುವ ತೊಂದರೆಗಳನ್ನು ಪರಿಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಮಯೂರ್ ಹೋಟೆಲ್ ಎದುರುಗಡೆ, ಹೊಸಪೇಟೆ ರಸ್ತೆ, ಕೊಪ್ಪಳ – 583231 ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08539-231548 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಅಲ್ಲದೆ ಇ-ಮೇಲ್ jddickpl123@gmail.com ಹಾಗೂ jd-koppal@karnatakaindustry.gov.in ವಿಳಾಸಗಳಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ಹೊಸ ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದ ಪರವಾನಗಿ ಪ್ರಕ್ರಿಯೆಯಲ್ಲಿನ ಅಡಚಣೆಗಳನ್ನು ನಿವಾರಿಸಿ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್