
ವಿಜಯಪುರ, 19 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಮುದ್ದೇಬಿಹಾಳ ಪಟ್ಟಣದಲ್ಲಿ ಬಂದ್ ಆಚರಿಸಲಾಯಿತು.
ಕಾಂಗ್ರೆಸ್ ಪಕ್ಷದ ಕಟ್ಟಾಳು, ಸರಳ ಸಜ್ಜನಿಕೆಯ ರಾಜಕಾರಣಿ ಹಾಗೂ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಅಜಾತಶತ್ರು ನಾಯಕ ಎಂದು ಗುರುತಿಸಿಕೊಂಡಿರುವ ಸಿ.ಎಸ್. ನಾಡಗೌಡ ಅವರಿಗೆ ಪಕ್ಷದಲ್ಲಿ ಸಲ್ಲಿಸಿರುವ ದೀರ್ಘಕಾಲದ ಸೇವೆ ಹಾಗೂ ರಾಜಕೀಯ ಅನುಭವವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಂದ್ ಸಂದರ್ಭದಲ್ಲಿ ವ್ಯಾಪಾರಸ್ಥರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ, ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಲಾಯಿತು.
ನಾಡಗೌಡ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸಿದ್ದು, ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಹಿರಿಯ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡುವುದರಿಂದ ವಿಜಯಪುರ ಜಿಲ್ಲೆಗೂ ಹೆಚ್ಚಿನ ಪ್ರಾತಿನಿಧ್ಯ ದೊರೆಯಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಹಿರಿಯ ನಾಯಕತ್ವ, ಪಕ್ಷ ನಿಷ್ಠೆ ಮತ್ತು ಜನಪರ ಸೇವೆಯನ್ನು ಪರಿಗಣಿಸಿ ಸಿ.ಎಸ್. ನಾಡಗೌಡ ಅಪ್ಪಾಜಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಬಂದ್ನಲ್ಲಿ ಭಾಗವಹಿಸಿದವರ ಪ್ರಮುಖ ಬೇಡಿಕೆಯಾಗಿತ್ತು.
ರಾಜ್ಯ ರಾಜಕಾರಣದಲ್ಲಿ ಸಂಪುಟ ವಿಸ್ತರಣೆ ಹಾಗೂ ಸಚಿವ ಸ್ಥಾನದ ವಿಚಾರ ಚರ್ಚೆಯಲ್ಲಿರುವ ಹಿನ್ನೆಲೆಯಲ್ಲಿ, ಮುದ್ದೇಬಿಹಾಳದಲ್ಲಿ ನಡೆದ ಈ ಬಂದ್ ರಾಜಕೀಯವಾಗಿ ಗಮನ ಸೆಳೆದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande