
ಬಾಗಲಕೋಟೆ, 19 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕಚೇರಿಯಲ್ಲಿದ್ದ ಪ್ರಮುಖ ದಾಖಲಾತಿಗಳು ಬೆಂಕಿಗೆ ಆಹುತಿಯಾಗಿದ್ದು, ಹಲವು ದಾಖಲೆಗಳು ಸುಟ್ಟು ಭಸ್ಮವಾಗಿವೆ.
ರಾತ್ರಿ ವೇಳೆ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಕಚೇರಿಯಲ್ಲಿದ್ದ ಸಿಸಿ ಕ್ಯಾಮೆರಾಗಳನ್ನು ಜಖಂಗೊಳಿಸಿರುವುದು ಅನುಮಾನಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಘಟನೆಯಿಂದ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಉಂಟಾಗಿದೆ.
ತಹಶೀಲ್ದಾರ ಕಚೇರಿಯಲ್ಲಿದ್ದ ಭೂ ದಾಖಲೆಗಳು, ಆಡಳಿತಾತ್ಮಕ ಕಡತಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಬೆಂಕಿಯಿಂದ ಉಂಟಾದ ನಷ್ಟದ ಪ್ರಮಾಣದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯದ ಹಿಂದೆ ಇರುವವರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸಿಸಿ ಕ್ಯಾಮೆರಾ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಸಲಾಗುತ್ತಿದೆ.
ಸರ್ಕಾರಿ ಕಚೇರಿಯಲ್ಲೇ ಇಂತಹ ಘಟನೆ ನಡೆದಿರುವುದು ಗಂಭೀರ ವಿಷಯವಾಗಿದ್ದು, ಭದ್ರತಾ ವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ. ತಪ್ಪಿತಸ್ಥರನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande