
ಕೊಪ್ಪಳ, 19 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಮತ್ತು ನೌಕರರು ಕಡ್ಡಾಯವಾಗಿ ಕರ್ತವ್ಯ ಮೊಬೈಲ್ ಅಪ್ಲಿಕೇಷನ್ನಲ್ಲಿ ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸೂಚನೆ ನೀಡಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಬೆಂಗಳೂರು ರವರು ಟಿಪ್ಪಣಿ ಪತ್ರದಲ್ಲಿ ತಿಳಿಸಿರುವಂತೆ, ಮಾನ್ಯ ಮುಖ್ಯಮಂತ್ರಿಯವರು ಇತ್ತೀಚೆಗೆ ನಡೆದ ಎಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿ, ನೌಕರರು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿ ಹಾಜರಿರುವಂತೆ ಸೂಚಿಸಿರುತ್ತಾರೆ. ಅದರಂತೆ ಎಲ್ಲಾ ಅಧಿಕಾರಿ, ನೌಕರರು ಕರ್ತವ್ಯ ಮೊಬೈಲ್ ಅಪ್ಲಿಕೇಷನ್ನಲ್ಲಿ ನೋಂದಣಿ ಮಾಡಿಕೊಂಡು ಪ್ರತಿದಿನ ತಮ್ಮ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕಿರುತ್ತದೆ.
ಜೂನ್ 16ರ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಇದುವರೆಗೂ 2,13,925 ಅಧಿಕಾರಿ, ನೌಕರರು ಕರ್ತವ್ಯ ಮೊಬೈಲ್ ಅಪ್ಲಿಕೇಷನ್ನಲ್ಲಿ ನೋಂದಾಯಿಸಿಕೊಂಡಿರುವುದಿಲ್ಲ. ಈ ಪ್ರಯುಕ್ತ ಇದುವರೆಗೂ ಕರ್ತವ್ಯ ಮೊಬೈಲ್ ಅಪ್ಲಿಕೇಷನ್ನಲ್ಲಿ ನೋಂದಾಯಿಸದ ಅಧಿಕಾರಿ, ನೌಕರರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುವಂತೆ ಹಾಗೂ ಈ ಬಗ್ಗೆ ಕೈಗೊಂಡ ಕ್ರಮದ ವರದಿಯನ್ನು 7 ದಿನಗಳೊಳಗಾಗಿ ಸಲ್ಲಿಸುವಂತೆ ಸೂಚಿಸಿರುತ್ತಾರೆ.
ಆದ್ದರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನಿರ್ದೇಶಿಸಿದಂತೆ, ಕೊಪ್ಪಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಗೊಳಪಡುವ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಮತ್ತು ನೌಕರರು ಕಡ್ಡಾಯವಾಗಿ ಕರ್ತವ್ಯ ಮೊಬೈಲ್ ಅಪ್ಲಿಕೇಷನ್ನಲ್ಲಿ ನೋಂದಣಿ ಈ ವಿಷಯದಲ್ಲಿ ಕೈಗೊಂಡ ಕ್ರಮದ ಬಗ್ಗೆ ಮೂರು ದಿನಗಳ ಒಳಗಾಗಿ ವರದಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ತಪ್ಪದೇ ಸಲ್ಲಿಸುವಂತೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್