
ಕೊಪ್ಪಳ, 19 ಜೂನ್ (ಹಿ.ಸ.) :
ಆ್ಯಂಕರ್ : ಜೂನ್ 28 ರಿಂದ ಜುಲೈ 1ರ ವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಡಿ 5 ವರ್ಷದೊಳಗಿನ ಎಲ್ಲ್ಲ ಮಕ್ಕಳಿಗೂ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದ್ದಾರೆ.
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಕುರಿತು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2ನೇ ಸುತ್ತಿನ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಪೋಲಿಯೋ ನಿರ್ಮೂಲನೆ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಮನೆ ಮನೆಗೆ ತೆರಳಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಬೇಕು. ಪಲ್ಸ್ ಪೋಲಿಯೋ ಲಸಿಕೆಯಿಂದ ಯಾವುದೇ ಅರ್ಹ ಮಗು ವಂಚಿತವಾಗಬಾರದು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 1 ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಇದಕ್ಕಾಗಿ ವಿವಿಧ ಇಲಾಖೆಗಳ ಸಹಕಾರ ತೆಗೆದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಪೋಲಿಯೊ ಲಸಿಕೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಿ ತಮಗೆ ವಹಿಸಲಾದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಎನ್.ಜಿ.ಓ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ತೆಗೆದುಕೊಂಡು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು 100ಕ್ಕೆ 100ರಷ್ಟು ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ಲಿಂಗರಾಜು ಟಿ., ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ರವೀಂದ್ರನಾಥ ಎಂ.ಎಚ್., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳಾದ ಡಾ.ಪ್ರಕಾಶ ಎಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ ಡಾ. ಶಶೀಧರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳಾದ ಡಾ. ಗೋನಾಳ ಕುಮಾರಸ್ವಾಮಿ, ಕೊಪ್ಪಳ ರೋಟರಿ ಕ್ಲಬ್ ಅಧ್ಯಕ್ಷರಾದ ಡಾ. ಕೆ.ಜಿ ಕುಲಕರ್ಣಿ, ಇನ್ನರ್ ವೀಲ್ ಕ್ಲಬ್ ಡಾ. ರಾಧಾ ಕುಲಕರ್ಣಿ ಸೇರಿದಂತೆ ಇತರೆ ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಎನ್.ಜಿ.ಓ.ಗಳ ಪ್ರನಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್