
ಚೆನೈ, 19 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆಗೆ ತಾಂತ್ರಿಕ, ಪರಿಸರ ಹಾಗೂ ಇತರೆ ಯಾವುದೇ ಅನುಮೋದನೆ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನ ಸಭೆ ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮಂಡಿಸಿದ ನಿರ್ಣಯಕ್ಕೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ಸೇರಿದಂತೆ ಸದನದ ಎಲ್ಲ ಸದಸ್ಯರು ಬೆಂಬಲ ಸೂಚಿಸಿದ್ದು, ಧ್ವನಿಮತದ ಮೂಲಕ ಅಂಗೀಕಾರ ನೀಡಲಾಗಿದೆ.
ನಿರ್ಣಯದಲ್ಲಿ ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕೈಗೊಂಡಿರುವ ಕ್ರಮವನ್ನು ಏಕಪಕ್ಷೀಯ ನಿರ್ಧಾರ ಎಂದು ಬಣ್ಣಿಸಲಾಗಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆಯು ಕಾವೇರಿ ಜಲ ವಿವಾದ ನ್ಯಾಯಮಂಡಳಿಯ 2007ರ ಅಂತಿಮ ತೀರ್ಪು ಹಾಗೂ 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದ ಆಶಯವನ್ನು ನಿರ್ಲಕ್ಷಿಸಿದೆ ಎಂದು ತಮಿಳುನಾಡು ಸರ್ಕಾರ ಆರೋಪಿಸಿದೆ.
ಕಾವೇರಿ ಜಲಾನಯನ ಪ್ರದೇಶವು ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶವಾಗಿದ್ದು, ಲಭ್ಯವಿರುವ ನೀರನ್ನು ರಾಜ್ಯಗಳ ನಡುವೆ ಹಂಚಿಕೆ ಮಾಡಲಾಗಿದೆ ಎಂದು ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿವೆ. ಹೀಗಾಗಿ ಜಲಾನಯನ ಪ್ರದೇಶದಲ್ಲಿ ಹೊಸ ನೀರು ಸಂಗ್ರಹಣಾ ಯೋಜನೆಗಳನ್ನು ಕೈಗೊಳ್ಳಬಾರದು ಹಾಗೂ ಹೆಚ್ಚುವರಿ ಪ್ರಮಾಣದ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡಬಾರದು ಎಂದು ನಿರ್ಣಯದಲ್ಲಿ ಒತ್ತಿ ಹೇಳಲಾಗಿದೆ.
ಕಾವೇರಿ ನೀರಿನ ಹಂಚಿಕೆ ವಿಷಯವು ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಅತ್ಯಂತ ಸೂಕ್ಷ್ಮ ಹಾಗೂ ಮಹತ್ವದ ವಿಚಾರವಾಗಿದೆ. ಆದ್ದರಿಂದ ಕಾವೇರಿ ಜಲಾನಯನ ಪ್ರದೇಶದ ಯಾವುದೇ ಭಾಗದಲ್ಲಿ ಇತರ ಜಲಾನಯನ ರಾಜ್ಯಗಳ ಒಪ್ಪಿಗೆ ಹಾಗೂ ಕೇಂದ್ರ ಸರ್ಕಾರದ ಅನುಮೋದನೆಯಿಲ್ಲದೆ ಅಣೆಕಟ್ಟು ಅಥವಾ ಹೊಸ ನೀರು ಸಂಗ್ರಹಣಾ ಯೋಜನೆಗಳನ್ನು ಕೈಗೊಳ್ಳಬಾರದು ಎಂದು ಸದನ ಅಭಿಪ್ರಾಯಪಟ್ಟಿದೆ.
ಕರ್ನಾಟಕ ಸರ್ಕಾರ ಸಲ್ಲಿಸಿರುವ ವಿವರವಾದ ಯೋಜನಾ ವರದಿಯನ್ನು ಪರಿಶೀಲಿಸದಂತೆ, ಪ್ರಕ್ರಿಯೆಗೊಳಿಸದಂತೆ ಹಾಗೂ ಅನುಮೋದಿಸದಂತೆ ಕೇಂದ್ರ ಜಲ ಆಯೋಗ ಮತ್ತು ಕೇಂದ್ರ ಸರ್ಕಾರವನ್ನು ತಮಿಳುನಾಡು ಸರ್ಕಾರ ಒತ್ತಾಯಿಸಿದೆ. ರಾಜ್ಯದ ರೈತರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ಈ ಕ್ರಮ ಅಗತ್ಯವಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
ಮೇಕೆದಾಟು ಯೋಜನೆ ಕುರಿತಂತೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮಂಡಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯ ಎಲ್ಲ ಪಕ್ಷಗಳ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದು, ಕರ್ನಾಟಕ–ತಮಿಳುನಾಡು ನಡುವಿನ ಕಾವೇರಿ ನೀರಿನ ವಿವಾದ ಮತ್ತೊಮ್ಮೆ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.