ಸಿದ್ದರಾಮಯ್ಯ ನೀಡಿದ ಭರವಸೆ ಈಡೇರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ
ಗದಗ, 02 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷೇತ್ರದ ಮುಖಂಡರು ಒತ್ತಾಯ ವ್ಯಕ್ತಪಡಿಸಿದ್
ಫೋಟೋ


ಗದಗ, 02 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷೇತ್ರದ ಮುಖಂಡರು ಒತ್ತಾಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಗದಗ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ನೆನಪಿಸಿ, ಇದೀಗ ಸಚಿವ ಸಂಪುಟದಲ್ಲಿ ರೋಣ ಕ್ಷೇತ್ರಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿಡಿಯೋವನ್ನು ಅಭಿಮಾನಿಗಳು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಆ ವಿಡಿಯೋದಲ್ಲಿ ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಲಾಗುತ್ತದೆ ಎಂಬ ಅರ್ಥದ ಹೇಳಿಕೆಯನ್ನು ಉಲ್ಲೇಖಿಸಿ, ರೋಣ ಕ್ಷೇತ್ರದ ಪ್ರತಿನಿಧಿಯಾದ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಆ ಮಾತನ್ನು ಕಾರ್ಯರೂಪಕ್ಕೆ ತರಬೇಕೆಂದು ಒತ್ತಾಯಿಸಲಾಗುತ್ತಿದೆ.

ರೋಣ ಕ್ಷೇತ್ರವು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಬಲಿಷ್ಠ ನೆಲೆಯಾಗಿದ್ದು, ಪಕ್ಷದ ಬೆಳವಣಿಗೆ ಹಾಗೂ ಸಂಘಟನೆ ಬಲಪಡಿಸುವಲ್ಲಿ ಶಾಸಕ ಜಿ.ಎಸ್. ಪಾಟೀಲರ ಪಾತ್ರ ಮಹತ್ವದ್ದಾಗಿದೆ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ. ಕಳೆದ ಹಲವು ಚುನಾವಣೆಯಲ್ಲಿ ಪಕ್ಷದ ಪರವಾಗಿ ಶ್ರಮಿಸಿದ ನಾಯಕನಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂಬ ಅಭಿಪ್ರಾಯವೂ ಕ್ಷೇತ್ರದ ಜನರಲ್ಲಿ ವ್ಯಕ್ತವಾಗುತ್ತಿದೆ.

ಅಭಿಮಾನಿಗಳ ಪ್ರಕಾರ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೋಣ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಜಿಲ್ಲೆಯ ಇತರೆ ಭಾಗಗಳಿಗೆ ಸಚಿವ ಸ್ಥಾನ ದೊರೆತಿದ್ದರೂ, ರೋಣ ಕ್ಷೇತ್ರದ ಜನಪ್ರತಿನಿಧಿಗೆ ಅವಕಾಶ ಸಿಗದಿರುವುದು ಕ್ಷೇತ್ರದ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ವೇಳೆ ಜಿ.ಎಸ್. ಪಾಟೀಲರನ್ನು ಪರಿಗಣಿಸುವ ಮೂಲಕ ಕ್ಷೇತ್ರದ ಜನರ ನಿರೀಕ್ಷೆಗೆ ಸ್ಪಂದಿಸಬೇಕೆಂದು ಒತ್ತಾಯಿಸಲಾಗುತ್ತಿದೆ.

ರಾಜಕೀಯವಾಗಿ ಅನುಭವ ಹೊಂದಿರುವ ಜಿ.ಎಸ್. ಪಾಟೀಲರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರು, ಯುವಕರು, ಮಹಿಳೆಯರು ಹಾಗೂ ವಿವಿಧ ಸಂಘಟನೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಬೆಂಬಲಿಗರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ, ಇದು ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವರಾಗುವ ಕೊನೆಯ ಅವಕಾಶವಾಗಬಹುದು ಎಂಬ ಅಭಿಪ್ರಾಯವೂ ಅಭಿಮಾನಿಗಳ ವಲಯದಲ್ಲಿ ಕೇಳಿಬರುತ್ತಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೋಣ ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಸಚಿವ ಸಂಪುಟ ವಿಸ್ತರಣೆಯ ಕುರಿತು ರಾಜ್ಯ ರಾಜಕೀಯದಲ್ಲಿ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ರೋಣ ಕ್ಷೇತ್ರದಿಂದ ಕೇಳಿಬರುತ್ತಿರುವ ಈ ಬೇಡಿಕೆ ಯಾವ ಮಟ್ಟಿಗೆ ಫಲ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ನಿರ್ಧಾರದ ಮೇಲೆ ರೋಣ ಕ್ಷೇತ್ರದ ರಾಜಕೀಯ ಭವಿಷ್ಯವೂ ಸಾಕಷ್ಟು ಅವಲಂಬಿತವಾಗಿರುವುದಾಗಿ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande