
ಗದಗ, 02 ಜೂನ್ (ಹಿ.ಸ.) :
ಆ್ಯಂಕರ್ : ರೋಣ ಪೊಲೀಸ್ ಠಾಣೆಯ ಉಪನಿರೀಕ್ಷಕ (ಪಿಎಸ್ಐ) ಪ್ರಕಾಶ್ ಬಣಕಾರ್ ಅವರ ವಿರುದ್ಧ ಭ್ರಷ್ಟಾಚಾರ, ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ಹಾಗೂ ಕರ್ತವ್ಯ ಲೋಪದ ಗಂಭೀರ ಆರೋಪಗಳನ್ನು ಹೊರಿಸಿ, ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಅಥವಾ ಗದಗ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ದಲಿತ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ರೋಣ ತಾಲ್ಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ವ್ಯಾಪಕವಾಗಿ ನಡೆಯುತ್ತಿದ್ದರೂ, ಅವುಗಳನ್ನು ತಡೆಯುವಲ್ಲಿ ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನಾಕಾರರ ಪ್ರಕಾರ, ರೋಣ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ ದಂಧೆ, ಇಸ್ಪೀಟ್ ಜೂಜಾಟ, ಅಕ್ರಮ ಸಾರಾಯಿ ಮಾರಾಟ ಹಾಗೂ ಪಡಿತರ ಅಕ್ಕಿ ಕಳ್ಳಸಾಗಣೆ ನಿರಂತರವಾಗಿ ನಡೆಯುತ್ತಿದ್ದು, ಇವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ. ಕೆಲವು ಅಕ್ರಮ ಚಟುವಟಿಕೆಗಳಿಗೆ ಅಧಿಕಾರಿಗಳ ಮಟ್ಟದಲ್ಲಿಯೇ ಬೆಂಬಲ ದೊರೆಯುತ್ತಿದೆ ಎಂಬ ಗಂಭೀರ ಆರೋಪಗಳನ್ನೂ ಅವರು ಮಾಡಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಹಿರಿಯ ದಲಿತ ಹೋರಾಟಗಾರ ರುದ್ರೇಶ್ ಹುಣಸಿಮರದ, “ಪಿಎಸ್ಐ ಪ್ರಕಾಶ್ ಬಣಕಾರ್ ಅವರು ಈ ಹಿಂದೆ ಬದಾಮಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೂ ಅಕ್ರಮ ದಂಧೆಕೋರರೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಆರೋಪಗಳು ಕೇಳಿ ಬಂದಿದ್ದವು. ಇದೀಗ ರೋಣದಲ್ಲಿಯೂ ಅದೇ ರೀತಿಯ ಬೆಳವಣಿಗೆಗಳು ನಡೆಯುತ್ತಿವೆ. ಸಮಾಜಘಾತಕ ಶಕ್ತಿಗಳೊಂದಿಗೆ ಕೈಜೋಡಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಕುರಿತು ಗಂಭೀರ ಅನುಮಾನಗಳಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ಬಾಗಲಕೋಟೆ ಜಿಲ್ಲಾಧ್ಯಕ್ಷ ಯುವರಾಜ್ ಬಂಡಿ ಮಾತನಾಡಿ, ರಾಜ್ಯದಲ್ಲಿ ಅಕ್ರಮಗಳ ವಿರುದ್ಧ ಧ್ವನಿ ಎತ್ತುವ ಹೋರಾಟಗಾರರು ಹಾಗೂ ಪತ್ರಕರ್ತರನ್ನು ಗುರಿಯಾಗಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು.
“ಸಾಮಾಜಿಕ ಹೋರಾಟಗಾರರಾದ ಹನುಮಂತವಾದಿ ಮತ್ತು ಬಸವರಾಜ ಕಾಳೆ ಅವರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು. ಹೋರಾಟದ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಆರಂಭಿಸಲಾಗುವುದು. ಯಾವುದೇ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.
ದಸಂಸ ರೋಣ ತಾಲ್ಲೂಕು ಮುಖಂಡ ಹನಮಂತ್ ಚಲವಾದಿ ಮಾತನಾಡಿ, “ಪ್ರತಿದಿನ ನೂರಾರು ಟಿಪ್ಪರ್ಗಳಲ್ಲಿ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ. ಪಡಿತರ ಅಕ್ಕಿ ಕಳ್ಳಸಾಗಣೆ, ಮಟ್ಕಾ ದಂಧೆ ಹಾಗೂ ವಿವಿಧ ಅಕ್ರಮ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ನಿರಂತರವಾಗಿ ದೂರು ನೀಡುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಿದರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸದೇ ಬಿಡುಗಡೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ರೋಣ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರೆ ಸತ್ಯಾಂಶ ಹೊರಬರಬಹುದು” ಎಂದು ಹೇಳಿದರು.
ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿ, ಪಿಎಸ್ಐ ಪ್ರಕಾಶ್ ಬಣಕಾರ್ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಅಥವಾ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿತ್ತು.
ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ಬಸವರಾಜ ಕಾಳೆ, ಬಾಲರಾಜ ಅರಬರ, ಸುರೇಶ್ ನಂದಿ, ರವಿ ಚಲವಾದಿ, ಶರಣು ಚಲವಾದಿ, ವಿಜಯ ಚಲವಾದಿ, ಮಹೇಶ್ ಮಾದರ್, ಸೋಮು ಮಾದರ್, ರಮೇಶ್ ಮಾದರ, ಬಸವರಾಜ ಹಲಗಿ, ರವಿ ಚಿಂತಾಲ, ಪೂಜಾ ಬೇವೂರು ಸೇರಿದಂತೆ ನೂರಾರು ದಲಿತ ಸಂಘಟನೆಗಳ ಮುಖಂಡರು, ಕನ್ನಡಪರ ಹೋರಾಟಗಾರರು, ಯುವಕರು ಹಾಗೂ ಪ್ರಗತಿಪರ ಚಿಂತಕರು ಭಾಗವಹಿಸಿದ್ದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದು, ನಂತರ ಪ್ರತಿಭಟನಾಕಾರರು ತಮ್ಮ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ, ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ರೋಣ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಪ್ರತಿಭಟನೆಯಲ್ಲಿ ಪ್ರಮುಖವಾಗಿ ಕೇಳಿ ಬಂದಿತು.
ಹಿಂದೂಸ್ತಾನ್ ಸಮಾಚಾರ್ / lalita MP