
ಬಾಗಲಕೋಟೆ, 02 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ–ಬನಹಟ್ಟಿ ನಗರದ ವಿವಿಧ ವಾರ್ಡ್ಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಇಂದು ತೇರದಾಳ ಶಾಸಕ ಸಿದ್ದು ಸವದಿ ಸ್ಥಳ ಪರಿಶೀಲನೆ ನಡೆಸಿದರು.
ನಗರದ ನಾನಾ ಪ್ರದೇಶಗಳಿಗೆ ಭೇಟಿ ನೀಡಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಾರ್ಡ್ ಗಳಲ್ಲಿನ ಮೂಲಸೌಕರ್ಯಗಳ ಸ್ಥಿತಿಗತಿಯನ್ನು ಅವಲೋಕಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಿದರು.
ಪರಿಶೀಲನೆ ವೇಳೆ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ನಾನಾ ನಾಗರಿಕ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ಹಲವು ವಾರ್ಡ್ ಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿ ಅವರ ಅಹವಾಲುಗಳನ್ನು ಆಲಿಸಲಾಯಿತು.
ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಹಾಗೂ ಜನಸಾಮಾನ್ಯರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ವಾರ್ಡ್ ಗಳಲ್ಲಿನ ಕುಂದುಕೊರತೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಲಾಯಿತು.
ನಗರದ ಸಮಗ್ರ ಅಭಿವೃದ್ಧಿಗೆ ಜನರ ಸಹಕಾರವೂ ಅಗತ್ಯವಾಗಿದ್ದು, ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸಿ ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ಜನರಿಗೆ ಅನುಕೂಲವಾಗುವಂತಹ ಕಾಮಗಾರಿಗಳಿಗೆ ಆದ್ಯತೆ ನೀಡಿ ನಗರದ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಿರಂತರ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳು, ಹಿರಿಯ ಮುಖಂಡರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದು, ತಮ್ಮ ವಾರ್ಡ್ ಗಳ ಸಮಸ್ಯೆಗಳು ಮತ್ತು ಅಭಿವೃದ್ಧಿ ಅಗತ್ಯಗಳ ಕುರಿತು ಮಾಹಿತಿ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande