ಕಮಕನೂರರಿಗೆ ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯತ್ವ : ಮುದಕಣ್ ಅಂಬಿಗೇರ ಒತ್ತಾಯ
ಬಾಗಲಕೋಟೆ, 02 ಜೂನ್ (ಹಿ.ಸ.) : ಆಂಕರ್ : ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಮತ್ತೊಮ್ಮೆ ಪೂರ್ಣಾವಧಿಯ ವಿಧಾನ ಪರಿಷತ್ ಸದಸ್ಯತ್ವ ನೀಡುವ ಮೂಲಕ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ಘಟಕಗಳ ಜಿಲ್ಲಾಧ್ಯಕ್ಷ ಮುದಕಣ್ ಅಂಬಿಗೇರ ಕಾಂಗ್ರೆಸ್ ಹೈಕಮಾಂಡ್
Demad


ಬಾಗಲಕೋಟೆ, 02 ಜೂನ್ (ಹಿ.ಸ.) :

ಆಂಕರ್ : ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಮತ್ತೊಮ್ಮೆ ಪೂರ್ಣಾವಧಿಯ ವಿಧಾನ ಪರಿಷತ್ ಸದಸ್ಯತ್ವ ನೀಡುವ ಮೂಲಕ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ಘಟಕಗಳ ಜಿಲ್ಲಾಧ್ಯಕ್ಷ ಮುದಕಣ್ ಅಂಬಿಗೇರ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಬಾಗಲಕೋಟೆ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಪ್ಪಣ್ಣಪ್ಪ ಕಮಕನೂರ ಅವರು ತಮ್ಮ ವಿಧಾನ ಪರಿಷತ್ ಸದಸ್ಯತ್ವದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಸದನದಲ್ಲಿ ಸಮರ್ಥವಾಗಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ವಿಶೇಷವಾಗಿ ಕೋಲಿ, ಕಬ್ಬಲಿಗ, ಅಂಬಿಗ ಹಾಗೂ ಬೆಸ್ತ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಸ್ಯೆಗಳನ್ನು ನಿರಂತರವಾಗಿ ಸದನದಲ್ಲಿ ಪ್ರಸ್ತಾಪಿಸಿ, ಸಮುದಾಯದ ಪರವಾಗಿ ಧ್ವನಿಯಾಗಿದ್ದಾರೆ. ಅವರ ಕಾರ್ಯವೈಖರಿ ಹಾಗೂ ಜನಪರ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತೊಮ್ಮೆ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ತಿಪ್ಪಣ್ಣಪ್ಪ ಕಮಕನೂರ ಅವರ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಜೂನ್ 2026ಕ್ಕೆ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಪುನರ್ನಿಯುಕ್ತಿಗೊಳಿಸುವುದು ಅಗತ್ಯವಾಗಿದೆ. ರಾಜ್ಯದ ಕರಾವಳಿ, ಮೈಸೂರು ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ಕೋಲಿ, ಕಬ್ಬಲಿಗ, ಅಂಬಿಗ ಹಾಗೂ ಬೆಸ್ತ ಸಮುದಾಯದ ಜನರು ಗಣನೀಯ ಸಂಖ್ಯೆಯಲ್ಲಿದ್ದರೂ ರಾಜಕೀಯ ಕ್ಷೇತ್ರದಲ್ಲಿ ಅವರಿಗೆ ಸೂಕ್ತ ಪ್ರಾತಿನಿಧ್ಯ ದೊರಕಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಇಂತಹ ಸಂದರ್ಭದಲ್ಲಿ ಸಮುದಾಯದ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಮಂಡಿಸಿರುವ ನಾಯಕನಿಗೆ ಮತ್ತೊಮ್ಮೆ ಅವಕಾಶ ನೀಡುವುದು ನ್ಯಾಯಸಮ್ಮತ ಕ್ರಮವಾಗುತ್ತದೆ. ಕಮಕನೂರ ಅವರ ಪುನರ್ನಿಯುಕ್ತಿಯಿಂದ ಹಿಂದುಳಿದ ಸಮುದಾಯಗಳ ವಿಶ್ವಾಸ ಹೆಚ್ಚುವುದರ ಜೊತೆಗೆ ಅವರ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಇನ್ನಷ್ಟು ಸ್ಪಂದನೆ ದೊರೆಯಲಿದೆ ಎಂದು ಹೇಳಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರು ಹಾಗೂ ಹೈಕಮಾಂಡ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ದೇವರಾಮಪ್ಪ ಮೂಲಿಮನಿ, ಸಂಗಮೇಶ ಕಂಬದ, ಅಜಿತ ಗಣೇಕರ, ಸಂಗಣ್ಣ ಮಾಗಿ, ರಮೇಶ ಪಡಸಲಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande