
ನವದೆಹಲಿ, 02 ಜೂನ್ (ಹಿ.ಸ.) :
ಆ್ಯಂಕರ್ : ತೆಲಂಗಾಣ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ತೆಲಂಗಾಣದ ಜನರು ತಮ್ಮ ನಾವೀನ್ಯತೆ, ಪರಿಶ್ರಮ ಹಾಗೂ ಉದ್ಯಮಶೀಲತೆಯ ಮನೋಭಾವಕ್ಕೆ ಹೆಸರುವಾಸಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯವು ತನ್ನ ಸಮೃದ್ಧ ಸಂಸ್ಕೃತಿ, ಐತಿಹಾಸಿಕ ಪರಂಪರೆ ಮತ್ತು ಅಭಿವೃದ್ಧಿಯ ಪಯಣದ ಮೂಲಕ ದೇಶದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ ಎಂದು ಅವರು ಶ್ಲಾಘಿಸಿದ್ದಾರೆ.
“ತೆಲಂಗಾಣವು ಧೈರ್ಯ ಮತ್ತು ದೃಢಸಂಕಲ್ಪದ ಪ್ರತೀಕವಾಗಿದೆ. ಅಭಿವೃದ್ಧಿ ಮತ್ತು ಪ್ರಗತಿಯ ಹಾದಿಯಲ್ಲಿ ರಾಜ್ಯವು ಗಮನಾರ್ಹ ಸಾಧನೆಗಳನ್ನು ಮಾಡುತ್ತಿದೆ. ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವಲ್ಲಿ ತೆಲಂಗಾಣದ ಬೆಳವಣಿಗೆಯ ಪಥವನ್ನು ಬೆಂಬಲಿಸಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ,” ಎಂದು ಪ್ರಧಾನಿ ಹೇಳಿದ್ದಾರೆ.
ರಾಜ್ಯದ ಎಲ್ಲ ನಾಗರಿಕರು ಆರೋಗ್ಯ, ಸುಖ, ಸಮೃದ್ಧಿ ಮತ್ತು ಯಶಸ್ಸನ್ನು ಹೊಂದಲಿ ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ಹಾರೈಸಿದ್ದಾರೆ.
ಪ್ರತಿ ವರ್ಷ ಜೂನ್ 2ರಂದು ತೆಲಂಗಾಣ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. 2014ರ ಜೂನ್ 2ರಂದು ಆಂಧ್ರ ಪ್ರದೇಶದಿಂದ ಪ್ರತ್ಯೇಕಗೊಂಡು ತೆಲಂಗಾಣವು ಭಾರತದ 29ನೇ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಸಾಂಸ್ಕೃತಿಕ ಹಾಗೂ ಸರ್ಕಾರಿ ಕಾರ್ಯಕ್ರಮಗಳನ್ನು ಆಯೋಜಿಸಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.