ಕರ್ನಾಟಕದ ನೀರಿನ ಹಕ್ಕಿಗೆ ಧಕ್ಕೆ ಒಪ್ಪಲ್ಲ : ವಿಜಯೇಂದ್ರ
ಬೆಂಗಳೂರು, 20 ಜೂನ್ (ಹಿ.ಸ.) : ಆ್ಯಂಕರ್ : ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿರುವ ವಿರೋಧಿ ನಿರ್ಣಯವನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ
Byv


ಬೆಂಗಳೂರು, 20 ಜೂನ್ (ಹಿ.ಸ.) :

ಆ್ಯಂಕರ್ : ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿರುವ ವಿರೋಧಿ ನಿರ್ಣಯವನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಕರ್ನಾಟಕದ ನ್ಯಾಯಸಮ್ಮತ ಹಕ್ಕುಗಳನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ತಮಿಳುನಾಡು ವಿಧಾನಸಭೆ ಏಕಪಕ್ಷೀಯವಾಗಿ ವಿರೋಧ ವ್ಯಕ್ತಪಡಿಸಿ ನಿರ್ಣಯ ಅಂಗೀಕರಿಸಿರುವುದು ಖಂಡನೀಯವಾಗಿದ್ದು, ಇದು ಭಾರತದ ಒಕ್ಕೂಟ ವ್ಯವಸ್ಥೆಯ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.

ಮೇಕೆದಾಟು ಯೋಜನೆ ಕರ್ನಾಟಕದ ಪಾಲಿನ ನೀರಿನ ಸದ್ಬಳಕೆ ಹಾಗೂ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಉದ್ದೇಶ ಹೊಂದಿದೆ. ಆದ್ದರಿಂದ ಈ ವಿಚಾರದಲ್ಲಿ ನೆರೆರಾಜ್ಯದ ಅನಗತ್ಯ ರಾಜಕೀಯ ಹಸ್ತಕ್ಷೇಪ ಮತ್ತು ಹಠಮಾರಿ ಧೋರಣೆಯನ್ನು ಕರ್ನಾಟಕ ಸಹಿಸುವುದಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

“ಕನ್ನಡ ನೆಲ, ಜಲ ಮತ್ತು ಭಾಷೆಯ ವಿಷಯ ಬಂದಾಗ ಮೌನವಾಗಿರುವ ಪ್ರಶ್ನೆಯೇ ಇಲ್ಲ. ತಮಿಳುನಾಡು ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ಕಾವೇರಿ ವಿಚಾರವನ್ನು ಪದೇ ಪದೇ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು. ರೈತರ ಹಿತ ಹಾಗೂ ಕನ್ನಡಿಗರ ಕುಡಿಯುವ ನೀರಿನ ಹಕ್ಕು ರಕ್ಷಿಸಲು ನಾವು ಯಾವುದೇ ಹಂತದ ಹೋರಾಟಕ್ಕೂ ಸಿದ್ಧ” ಎಂದು ಅವರು ಎಚ್ಚರಿಸಿದ್ದಾರೆ.

ಇದೇ ವೇಳೆ, ಕರ್ನಾಟಕದಲ್ಲಿ ಕಾವೇರಿ ಹಕ್ಕಿನ ಪರ ಮಾತನಾಡುವ ಕಾಂಗ್ರೆಸ್, ತಮಿಳುನಾಡಿನಲ್ಲಿ ಮೇಕೆದಾಟು ವಿರೋಧಿ ನಿರ್ಣಯ ಮಂಡಿಸಿರುವ ಸರ್ಕಾರದ ಭಾಗವಾಗಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧವೂ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ಈ ನಿಲುವು ಇಬ್ಬಂದಿ ನೀತಿಗೆ ಸಾಕ್ಷಿಯಾಗಿದ್ದು, ಕನ್ನಡಿಗರ ಹಿತಾಸಕ್ತಿಗೆ ದ್ರೋಹ ಎಸಗಿದಂತಾಗಿದೆ ಎಂದು ಆರೋಪಿಸಿದ್ದಾರೆ.

ಮೇಕೆದಾಟು ಯೋಜನೆ ಹಾಗೂ ಕಾವೇರಿ ಹಕ್ಕಿನ ವಿಚಾರದಲ್ಲಿ ಕರ್ನಾಟಕ ಪಕ್ಷಾತೀತ ಹೋರಾಟ ನಡೆಸಬೇಕು ಎಂದು ಕರೆ ನೀಡಿದ ಅವರು, ನೀರಿನ ವಿಷಯದಲ್ಲಿ ರಾಜಕೀಯ ಮಾಡಲು ಬಿಜೆಪಿ ಬಯಸುವುದಿಲ್ಲ. ಆದರೆ ಕಾಂಗ್ರೆಸ್ ರಾಜ್ಯದ ಹಿತಾಸಕ್ತಿಗಿಂತ ತನ್ನ ಹೈಕಮಾಂಡ್ನ ರಾಜಕೀಯ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದ್ದಾರೆ.

ಕಾವೇರಿ ನೀರು ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕದ ಹಕ್ಕುಗಳನ್ನು ರಕ್ಷಿಸಲು ಬಿಜೆಪಿ ನಿರಂತರ ಹೋರಾಟ ಮುಂದುವರಿಸಲಿದೆ ಎಂದು ವಿಜಯೇಂದ್ರ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande