ಆಗಸ್ಟ್ 26ಕ್ಕೆ ‘ಟಾಕ್ಸಿಕ್’ ಬಿಡುಗಡೆ
ಬೆಂಗಳೂರು, 21 ಜೂನ್ (ಹಿ.ಸ.) : ಆ್ಯಂಕರ್ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಹಲವು ತಿಂಗಳುಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿರುವ ಯಶ್, ತಮ್ಮ ಚಿತ್ರವು ಆಗಸ್ಟ್ 26ರಂದು ವಿಶ್ವದಾದ್ಯಂತ ಅದ್ಧೂ
ಟಾಕ್ಸಿಕ್


ಬೆಂಗಳೂರು, 21 ಜೂನ್ (ಹಿ.ಸ.) :

ಆ್ಯಂಕರ್ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಹಲವು ತಿಂಗಳುಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿರುವ ಯಶ್, ತಮ್ಮ ಚಿತ್ರವು ಆಗಸ್ಟ್ 26ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಚಿತ್ರವು ಜೂನ್ 4ರಂದು ಬಿಡುಗಡೆಯಾಗಬೇಕಿತ್ತು. ಆದರೆ ಜಾಗತಿಕ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆಯನ್ನು ಮುಂದೂಡಲಾಗಿತ್ತು. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್ನಲ್ಲಿ ನಡೆದ ಪ್ರತಿಷ್ಠಿತ ‘ಸಿನಿಮಾಕಾನ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್ ಹಾಗೂ ಚಿತ್ರತಂಡಕ್ಕೆ ಅಂತಾರಾಷ್ಟ್ರೀಯ ವಿತರಕರಿಂದ ಉತ್ತಮ ಪ್ರತಿಕ್ರಿಯೆ ದೊರೆತ ಹಿನ್ನೆಲೆಯಲ್ಲಿ ಚಿತ್ರವನ್ನು ವಿಶ್ವಮಟ್ಟದಲ್ಲಿ ಇನ್ನಷ್ಟು ವ್ಯಾಪಕವಾಗಿ ಬಿಡುಗಡೆ ಮಾಡುವ ಯೋಜನೆ ರೂಪಿಸಲಾಗಿದೆ.

ಬಿಡುಗಡೆ ದಿನಾಂಕ ಮುಂದೂಡಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಮರುಚಿತ್ರೀಕರಣ ನಡೆಯುತ್ತಿದೆ, ನಿರ್ದೇಶಕರೊಂದಿಗೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳು ಹರಿದಾಡಿದ್ದವು. ಆದರೆ ಇದೀಗ ಅಂತಿಮ ಬಿಡುಗಡೆ ದಿನಾಂಕವನ್ನು ಘೋಷಿಸುವ ಮೂಲಕ ಅಂತಹ ಎಲ್ಲ ಊಹಾಪೋಹಗಳಿಗೆ ಚಿತ್ರತಂಡ ತೆರೆ ಎಳೆದಿದೆ. ಸಿನಿಮಾ ಸಂಪೂರ್ಣವಾಗಿ ಸಿದ್ಧವಾಗಿದ್ದು, ಜಾಗತಿಕ ಪ್ರಚಾರ ಹಾಗೂ ಬಿಡುಗಡೆಗೆ ಸಂಬಂಧಿಸಿದ ಕಾರ್ಯಗಳು ಮಾತ್ರ ನಡೆಯುತ್ತಿವೆ ಎಂದು ತಿಳಿಸಲಾಗಿದೆ.

ಗೀತು ಮೋಹನ್ದಾಸ್ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್ ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲೂ ಚಿತ್ರ ಬಿಡುಗಡೆಯಾಗಲಿದೆ.

ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಸೇರಿದಂತೆ ಹಲವು ಖ್ಯಾತ ಕಲಾವಿದರು ನಟಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಚಿತ್ರವು ಆಗಸ್ಟ್ 26ರಂದು ಬಿಡುಗಡೆಯಾಗಲಿದ್ದು, ಯಶ್ ಅವರ ಸಿನಿ ಪಯಣಕ್ಕೆ ಮತ್ತೊಂದು ಮಹತ್ವದ ಮೈಲುಗಲ್ಲಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande