
ವಿಜಯಪುರ, 22 ಜೂನ್ (ಹಿ.ಸ.) :
ಆ್ಯಂಕರ್ : ಗ್ರಾಮೀಣ ಪ್ರದೇಶಗಳ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಿಷಿ ಆನಂದ ಸೂಚಿಸಿದರು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಿಂದಗಿ ಮತ್ತು ಆಲಮೇಲ ತಾಲೂಕುಗಳ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರು ಪ್ರತಿಯೊಬ್ಬರಿಗೂ ಅತ್ಯಂತ ಅಗತ್ಯವಾದ ಮೂಲಭೂತ ಸೌಲಭ್ಯವಾಗಿದ್ದು, ಗ್ರಾಮೀಣ ಭಾಗದ ಜನರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಸಿಂದಗಿ ಹಾಗೂ ಆಲಮೇಲ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಜಲಮೂಲಗಳು, ನೀರಿನ ಲಭ್ಯತೆ, ಪ್ರಸ್ತುತ ಸ್ಥಿತಿಗತಿ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಇಒ ಅವರು, ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನೀರಿನ ಮೂಲಗಳ ಎಫ್ಟಿಕೆ ಪರೀಕ್ಷೆ ಬಾಕಿ ಇರುವ ಗ್ರಾಮಗಳಲ್ಲಿ ಎರಡು ದಿನಗಳೊಳಗಾಗಿ ಪರೀಕ್ಷೆ ಪೂರ್ಣಗೊಳಿಸಬೇಕು. ಕಲುಷಿತ ನೀರು ಪೂರೈಕೆಯಂತಹ ಘಟನೆಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ಪ್ರತಿದಿನ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಬೇಕು. ಸಮಸ್ಯೆಗಳು ಕಂಡುಬಂದರೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಜಲ ಜೀವನ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಕಾಮಗಾರಿಗಳ ಗುಣಮಟ್ಟದ ಮೇಲ್ವಿಚಾರಣೆಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿರ್ವಹಿಸಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ನಿರ್ವಹಣೆಯ ಜವಾಬ್ದಾರಿ ಗ್ರಾಮ ಪಂಚಾಯಿತಿಗಳದ್ದಾಗಿರುವುದರಿಂದ ಆರಂಭಿಕ ಹಂತದಲ್ಲಿಯೇ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಜಲ ಜೀವನ ಮಿಷನ್ ಯೋಜನೆಗೆ ಸಂಬಂಧಿಸಿದ ಫಲಾನುಭವಿಗಳ ಆಧಾರ್ ಕಾರ್ಡ್ ಅಪ್ಲೋಡ್ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಾಗೂ ಮುಂದಿನ 10 ದಿನಗಳೊಳಗಾಗಿ ಹರ್ ಘರ್ ಜಲ್ ಡಿಕ್ಲರೇಷನ್ ಅಭಿಯಾನವನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ತಾಲೂಕಿನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದ ಸಿಇಒ ಅವರು, ದುರಸ್ತಿ ಅಗತ್ಯವಿರುವ ಘಟಕಗಳ ಅಂದಾಜು ಮೊತ್ತದ ಪ್ರಸ್ತಾವನೆಗಳನ್ನು ತಕ್ಷಣ ಸಲ್ಲಿಸುವಂತೆ ಸೂಚಿಸಿದರು. ಜಲಧಾರೆ ಯೋಜನೆಯಡಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಇದೇ ವೇಳೆ ನರೇಗಾ ಯೋಜನೆಯ ಪ್ರಗತಿ ಪರಿಶೀಲಿಸಿದ ಅವರು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 100 ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಮಾನವ ದಿನಗಳ ಸೃಜನೆ ಹೆಚ್ಚಿಸುವುದು, ನೋಂದಾಯಿತ ಕಾರ್ಮಿಕರ ಇ-ಕೆವೈಸಿ ಪೂರ್ಣಗೊಳಿಸುವುದು, ಕೂಲಿ ಪಾವತಿ ಹಾಗೂ ಕಾಮಗಾರಿಗಳ ಜಿಯೋ ಟ್ಯಾಗಿಂಗ್ ಪ್ರಕ್ರಿಯೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ವಿವಿಧ ವಸತಿ ಯೋಜನೆಗಳಡಿ ಕಾರ್ಯಾದೇಶ ಪಡೆದ ಫಲಾನುಭವಿಗಳು ತಕ್ಷಣ ಮನೆ ನಿರ್ಮಾಣ ಕಾರ್ಯ ಆರಂಭಿಸುವಂತೆ ಮನವರಿಕೆ ಮಾಡಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಇ-ಹಾಜರಾತಿ ಸಲ್ಲಿಕೆ, ತೆರಿಗೆ ವಸೂಲಾತಿ ಸೇರಿದಂತೆ ಆಡಳಿತಾತ್ಮಕ ಕಾರ್ಯಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಿಂದಗಿ ಮತ್ತು ಆಲಮೇಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು ಜಿ. ಅಗ್ನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ತಾರಾನಾಥ ರಾಠೋಡ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಶೋಭಾ ಮುದಗಲ್, ಕಿರಿಯ ಅಭಿಯಂತರರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande