
ವಿಜಯಪುರ, 23 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದ ಆರು ಜನರ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೂವಾರಿ ಮಹೇಶ್ ತಳವಾರ್ ನನ್ನು ಪೊಲೀಸರ ಗುಂಡೇಟಿನಿಂದ ಚೇತರಿಸಿಕೊಂಡಿದ್ದು ಆತನ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಬಂಧನದ ವೇಳೆ ಆರೋಪಿ ಪರಾರಿಯಾಗಲು ಯತ್ನಿಸಿ ಪೊಲೀಸರ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.
ಮೇ 29ರಂದು ಗೋವಿಂದಪುರ ಗ್ರಾಮದಲ್ಲಿ ಭೂ ವಿವಾದದ ಹಿನ್ನೆಲೆ ನಡೆದಿದ್ದ ಮಾರಕ ದಾಳಿಯಲ್ಲಿ ಒಂದೇ ಕುಟುಂಬದ ಆರು ಜನರು ಹತ್ಯೆಯಾಗಿದ್ದರು. ಈ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿತ್ತು. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ತೀವ್ರಗೊಳಿಸಲಾಗಿತ್ತು.
ತನಿಖೆ ವೇಳೆ ಮಹೇಶ್ ತಳವಾರ್ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನ ಬಂಧನಕ್ಕೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಲ್ಲದೆ ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟ ನಡೆಸಿ, ಅಧಿಕಾರಿಗಳಿಗೆ ಚಾಕುವಿನಿಂದ ಬೆದರಿಕೆ ಹಾಕಿ ದಾಳಿ ನಡೆಸಲು ಮುಂದಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಸ್ಥಿತಿ ಕೈಮೀರುವ ಹಂತ ತಲುಪಿದ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚರಿಕೆ ನೀಡಿದರೂ ಆರೋಪಿ ಹಿಂಸಾತ್ಮಕವಾಗಿ ವರ್ತಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಗಾಯಗೊಂಡ ಮಹೇಶ್ ತಳವಾರ್ನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆ ವೇಳೆ ಚಡಚಣ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶೇಖರ್ ಪವಾರ್ ಹಾಗೂ ವಿಜಯಕುಮಾರ್ ಬನಸೋಡೆ ಗಾಯಗೊಂಡಿದ್ದು, ಇಬ್ಬರಿಗೂ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 38 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪೊಲೀಸರು ಉಳಿದ ಆರೋಪಿಗಳ ಪತ್ತೆ ಹಾಗೂ ಪ್ರಕರಣದ ಸಂಪೂರ್ಣ ತನಿಖೆಯಲ್ಲಿ ತೊಡಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande