
ವಿಜಯಪುರ, 23 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ನಗರದ ರಹೀಮ್ ನಗರ ಪ್ರದೇಶದಲ್ಲಿ ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ಗಳನ್ನು ಸಂಗ್ರಹಿಸಿ, ಅನಧಿಕೃತವಾಗಿ ಅನಿಲ ವರ್ಗಾವಣೆ ಮಾಡುತ್ತಿದ್ದ ಅಡ್ಡೆ ಮೇಲೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಹಾಗೂ ಗಾಂಧಿ ಚೌಕ್ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಗೃಹ ಬಳಕೆ ಹಾಗೂ ವಾಣಿಜ್ಯ ಸಿಲಿಂಡರ್ ಸೇರಿ ಒಟ್ಟು 23 ಸಿಲಿಂಡರ್ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮನೆಯ ಬಳಕೆಯ ಸಿಲಿಂಡರ್ಗಳಿಂದ ವಾಣಿಜ್ಯ ಬಳಕೆಯ ಸಿಲಿಂಡರ್ಗಳಿಗೆ ಅನಿಲ ವರ್ಗಾವಣೆ ಮಾಡುತ್ತಿದ್ದ ವೇಳೆ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿದ್ದ ಅಕ್ರಮ ಚಟುವಟಿಕೆಗಳನ್ನು ಪತ್ತೆ ಹಚ್ಚಲಾಗಿದೆ.
ಅಧಿಕಾರಿಗಳ ಪ್ರಕಾರ, ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ LPG ಅನಿಲ ವರ್ಗಾವಣೆ ಮಾಡುವುದು ಅಪಾಯಕಾರಿ ಹಾಗೂ ಕಾನೂನುಬಾಹಿರವಾಗಿದೆ. ಇಂತಹ ಚಟುವಟಿಕೆಗಳಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಘಟನೆ ಸಂಬಂಧಿಸಿದಂತೆ ಅಕ್ರಮ LPG ದಂಧೆ ನಡೆಸುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಅಕ್ರಮವಾಗಿ ಗ್ಯಾಸ್ ಸಂಗ್ರಹಣೆ ಹಾಗೂ ಮಾರಾಟ ಮಾಡುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಈ ಜಂಟಿ ಕಾರ್ಯಾಚರಣೆಯಿಂದ ನಗರದಲ್ಲಿ ನಡೆಯುತ್ತಿದ್ದ ಅಕ್ರಮ LPG ಚಟುವಟಿಕೆಗೆ ಕಡಿವಾಣ ಬೀಳುವ ನಿರೀಕ್ಷೆ ವ್ಯಕ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande